ಮಳೆ ಹಾನಿ ನಿಯಂತ್ರಣ, ಪರಿಹಾರ ಕ್ರಮಗಳಿಗೆ ಡಿಸಿ ಸೂಚನೆ

27CBP1
Published on

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆ ಹಾನಿ ನಿಯಂತ್ರಣ ಮತ್ತು ಪರಿಹಾರ ಕ್ರಮಗಳನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಸಜ್ಜಾಗಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಕೈಗೊಂಡಿದ್ದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂಗಾರು ಅವಧಿಯಲ್ಲಿ ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಏನೇ ತೊಂದರೆಯಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಜೀವ ಮತ್ತು ಆಸ್ತಿ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಹೊಂಡಗಳಲ್ಲಿ ಪಾಚಿ ಕಟ್ಟದಂತೆ, ಕಾಲ ಕಾಲಕ್ಕೆ ಸ್ವಚ್ಛತೆ ಕೈಗೊಳ್ಳಲು ಸಂಬಂಧಪಟ್ಟ ರೈತರಿಗೆ ತಿಳಿಸಬೇಕು. ಪ್ರಮುಖವಾಗಿ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವಂತಹ ಪ್ರಕರಣಗಳಿಗೆ ಆಸ್ಪದ ನೀಡಬಾರದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜಿ.ಪಂ.ಉಪ ಕಾರ್ಯದರ್ಶಿ ಎನ್.ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವ್ ಮತ್ತಿತರರು ಇದ್ದರು.

* ಹಲವು ವಿಚಾರಗಳ ಚರ್ಚೆ

ಮಳೆಗಾಲದ ಸಂದರ್ಭದಲ್ಲಿ ಆಯಾ ತಾಲೂಕಿನಲ್ಲಿರುವ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ, ಕಟ್ಟಡ ಸ್ಥಿತಿಗತಿಗಳ ಪರಿಶೀಲನೆ ಮತ್ತು ವರದಿ ಸಲ್ಲಿಕೆ, ಅಗ್ನಿ ಶಾಮಕದಳ ತುರ್ತು ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಸುರಕ್ಷತಾ ಉಪಕರಣಗಳೊಂದಿಗೆ ಸಜ್ಜಾಗಿರುವಿಕೆ, ಅಗತ್ಯ ಸೇವೆಗೆ ಗೃಹ ರಕ್ಷಕದಳ ಸಿಬ್ಬಂದಿ ಲಭ್ಯ ತೆ, ವಿದ್ಯುತ್ ತಂತಿಗಳು ಜೋತು ಬಿದ್ದಿರುವಿಕೆಯು ಕಂಡು ಬಂದಲ್ಲಿ ಕೂಡಲೇ ಸರಿಪಡಿಸುವಿಕೆ, ವಿದ್ಯುತ್ ಅವಘಡಗಳಿಗೆ ಕಡಿವಾಣ, ಜಿಲ್ಲೆಯಲ್ಲಿ ಎಲ್ಲ ತಾಲೂಕಿನ ಟಾಸ್ಕ್ ಫೋರ್ಸ್ ಕಮಿಟಿ ಚುರುಕು, ಸಾರ್ವಜನಿಕರಿಗೆ ತುರ್ತು ಸ್ಪಂದನೆಗಾಗಿ ತಾಲೂಕುಗಳಲ್ಲಿ ಕಂಟ್ರೋಲ್ ರೂಂ ಸ್ಥಾಪನೆಯ ಬಗ್ಗೆ ಚರ್ಚಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net