More

    ಮತದಾನ ಮಾಡುವಂತೆ ಅರಿವು ಮೂಡಿಸಿ

    ಹನೂರು : ಚುನಾವಣೆ ಸುಸೂತ್ರವಾಗಿ ನಡೆಯಬೇಕಾದರೆ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮತಗಟ್ಟೆಯ ಮೇಲ್ವಿಚಾರಕರು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ತಿಳಿಸಿದರು.

    ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶನಿವಾರ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮತಗಟ್ಟೆಯ ಮೇಲ್ವಿಚಾರಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

    ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ಮತದಾನ ಪ್ರಮುಖ ಪಾತ್ರ ವಹಿಸಿದೆ. ಹಾಗಾಗಿ ಚುನಾವಣೆ ಸುಸೂತ್ರವಾಗಿ ನಡೆಯಬೇಕಾದರೆ ಬಿಎಲ್‌ಒಗಳು ಹಾಗೂ ಅಧಿಕಾರಿಗಳ ಪಾತ್ರ ಹಿರಿದು. ಮಾರ್ಚ್ ತಿಂಗಳ 2 ಅಥವಾ 3ನೇ ವಾರದಲ್ಲಿ ಲೋಕಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಆದ್ದರಿಂದ ಮತದಾರರ ಪಟ್ಟಿ ದೋಷರಹಿತದಿಂದ ಕೂಡಿರಬೇಕು. ಹಾಗಾಗಿ ಪರಿಷ್ಕರಣೆಯಾಗಬೇಕಿದೆ. ಈ ದಿಸೆಯಲ್ಲಿ ಮನೆಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. 18 ವರ್ಷ ವಯೋಮಾನದ ಯುವ ಜನತೆಯನ್ನು ಮತದಾರರ ಪಟ್ಟಿಯಲ್ಲಿ ಸೇರಿಸಬೇಕು. ಮತದಾನ ಮಾಡುವಂತೆ ಅರಿವು ಮೂಡಿಸಬೇಕು. ಹಾಗೆಯೇ ಅಗತ್ಯ ದಾಖಲೆ ಪಡೆದು ಮೃತಪಟ್ಟವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬೇಕು. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಪ್ರತಿಯೊಬ್ಬರೂ ನಿರ್ಭೀತಿಯಿಂದ ಮತದಾನ ಮಾಡುವಂತೆ ತಿಳಿಸಬೇಕು. ಈ ಕಾರ್ಯ ನಿಮ್ಮಿಂದ ಮಾತ್ರ ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

    ಉಪ ವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಗುರುಪ್ರಸಾದ್, ಡಿಡಿಪಿಐ ರಾಮಚಂದ್ರರಾಜೇ ಅರಸ್, ಬಿಇಒ ಶಿವರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ನಂಜಮಣಿ ಹಾಗೂ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts