More

    ಫಲಪುಷ್ಪ ಪ್ರದರ್ಶನ ವ್ಯವಸ್ಥಿತವಾಗಿರಲಿ

    ಮಡಿಕೇರಿ: ಫೆ.7 ರಿಂದ 10ರವರೆಗೆ ರಾಜಾಸೀಟ್ ಉದ್ಯಾನದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು.
    ಫಲಪುಷ್ಪ ಪ್ರದರ್ಶನ ಸಂಬಂಧ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಾಜಾಸೀಟ್ ಉದ್ಯಾನದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಪೂರ್ವ ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಪಡೆದರು.
    ಫಲಪುಷ್ಪ ಪ್ರದರ್ಶನ ಸಂಬಂಧಿಸಿದಂತೆ ಮಾಹಿತಿ ನೀಡಿದ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್, ಫೆ.7 ರಿಂದ 10 ರವರೆಗೆ ವಿವಿಧ ಇಲಾಖೆಗಳು ಹಾಗೂ ಅಕಾಡೆಮಿಗಳ ಸಹಕಾರದಲ್ಲಿ ರಾಜಾಸೀಟ್‌ನಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ.7 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ, ಫೆ.8 ರಂದು ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಹಾಗೂ ಫೆ.9 ರಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ವಿವರಿಸಿದರು.
    ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ ಇದ್ದು, ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಆಗಮಿಸಬೇಕು ಅಥವಾ ಪ್ರಾಂಶುಪಾಲರಿಂದ ಪತ್ರ ತರುವಂತಾಗಬೇಕು. ಉಳಿದಂತೆ ಪ್ರವಾಸಿಗರಿಗೆ 10 ರೂ. ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ವಾಹನ ನಿಲುಗಡೆ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ ಮತ್ತಿತರ ಬಗ್ಗೆ ಪೊಲೀಸ್ ಇಲಾಖೆಯ ಸಹಕಾರ ಅಗತ್ಯ ಎಂದು ಕೋರಿದರು.
    ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಬಿ.ಬೆಳ್ಯಪ್ಪ ಮಾತನಾಡಿ, ಫಲಪುಷ್ಪ ಪ್ರದರ್ಶನ ಸಂದರ್ಭದಲ್ಲಿ ಜನದಟ್ಟನೆ ಇರುವುದರಿಂದ ಖಾಸಗಿ ವಾಹನಗಳನ್ನು ಸಂಜೆ 5 ರಿಂದ ರಾತ್ರಿ 9 ಗಂಟೆವರೆಗೆ ತಾತ್ಕಾಲಿಕವಾಗಿ ಹಳೇ ಖಾಸಗಿ ಬಸ್ ನಿಲ್ದಾಣದವರೆಗೆ ಅವಕಾಶ ಮಾಡಿಕೊಡಲಾಗುವುದು. ಅಲ್ಲದೆ ಎಪಿಎಂಸಿ ಆವರಣದಲ್ಲಿ ಖಾಸಗಿ ಬಸ್ ನಿಲುಗಡೆಗೆ ವ್ಯವಸ್ಥೆ ಮಾಡಬೇಕಿದೆ ಎಂದು ಸಭೆಯ ಗಮನಕ್ಕೆ ತಂದರು.
    ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಮನಹರಿಸಬೇಕು. ಈ ಸಂಬಂಧ ಚರ್ಚಿಸಿ ಅಗತ್ಯ ಮಾಹಿತಿಯನ್ನು ಮುಂಚಿತವಾಗಿ ನೀಡಬೇಕು. ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲಾಗಿದ್ದು, ಯಾರೂ ಪ್ಲಾಸ್ಟಿಕ್ ತರುವಂತಿಲ್ಲ. ಆಹಾರ ಮಳಿಗೆ ಏರ್ಪಡಿಸಲು ಅಗತ್ಯ ಕ್ರಮ ವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಿಗೆ ಸಲಹೆ ಮಾಡಿದರು.
    ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಮೋದ್ ಫಲಪುಷ್ಪ ಪ್ರದರ್ಶನ ಬಗ್ಗೆ ಮಾಹಿತಿ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು, ಪೌರಾಯುಕ್ತ ಎಂ.ಎಲ್.ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಂಜುನಾಥ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts