

ಜೈಪುರ: ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ನಡೆದಿದೆ.
ಮೃತರನ್ನು ಮನೀಷ್ ಶರ್ಮಾ, ಕೈಲಾಶ್ ಶರ್ಮಾ, ಸತೀಶ್ ಶರ್ಮಾ, ಅನಿತಾ, ಸಂತೋಷ್, ಪೂನಂ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವವರನ್ನು ಮನನ್ ಹಾಗೂ ದೀಪಾಲಿ ಎಂದು ಗುರುತಿಸಲಾಗಿದ್ದು, ಇವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬೋನ್ಲಿ ಪೊಲೀಸ್ ಠಾಣಾಧಿಕಾರಿ ಧರಮ್ಪಾಲ್ ಸಿಂಗ್, ಅಪಘಾತಕ್ಕೀಡಾದವರು ಸವಾಯಿ ಮಾಧೋಪುರದಲ್ಲಿರುವ ಗಣೇಶನ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಇವರು ಚಲಿಸುತ್ತಿದ್ದ ಕಾರಿಗೆ ವಾಹನ ಒಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇವರು ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಬೋನ್ಲಿ ಪೊಲೀಸ್ ಠಾಣಾಧಿಕಾರಿ ಧರಮ್ಪಾಲ್ ಸಿಂಗ್ ತಿಳಿಸಿದ್ದಾರೆ.