ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್​?: ಪತ್ರಿಕಾ ಪ್ರಕಟಣೆಯಲ್ಲಿ ಗುಟ್ಟು ಬಿಚ್ಚಿಟ್ಟ ರೆಡ್ಡಿ

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್‌ ಶಾಸಕ ರಾಮಲಿಂಗಾರೆಡ್ಡಿ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಎಲ್ಲ ಸೂಚನೆಗಳು ಕಾಣುತ್ತಿದ್ದು, ನಾನೆಂದೂ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟವನಲ್ಲ. ಸ್ಥಾನಮಾನ ಪಡೆಯಲು ಎಂದೂ ಆಸೆಪಟ್ಟವನಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಬಹುತೇಕ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಕಾರ್ಯಕರ್ತರಿಗೆ ಬಹುತೇಕ ಅರಿವಿದೆ. ಕಾಂಗ್ರೆಸ್‌ನಲ್ಲಿನ ಕೆಲವು ವಿದ್ಯಾಮಾನಗಳಿಂದ ಬೇಸರವಾಗಿ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುತ್ತೇನೆ. ನಾನೆಂದು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟವನಲ್ಲ, ಸ್ಥಾನಮಾನ ಪಡೆಯಲು ಆಸೆಪಟ್ಟವನಲ್ಲ ಎಂದು ಹೇಳಿದ್ದಾರೆ.

ಕಳೆದ 45 ವರ್ಷದ ಸುಧೀರ್ಘ ರಾಜಕೀಯ ಜೀವನದಲ್ಲಿ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ, 7 ಬಾರಿ ಶಾಸಕನಾಗಿ ಪಕ್ಷದ ಶ್ರೇಯೋಭಿವೃದ್ಧಿಗಾಗಿ, ನನ್ನ ಮತಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಸಚಿವನಾಗಿದ್ದಂತ ಸಂದರ್ಭದಲ್ಲಿ ರಾಜ್ಯಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್‍ನ ಹಲವಾರು ವಿದ್ಯಾಮಾನಗಳಿಂದ ಶಾಸಕ ಸ್ಥಾನಕ್ಕೆ ಮಾತ್ರ ನನ್ನ ರಾಜೀನಾಮೆ ಹೊರತು ಪಕ್ಷಕ್ಕಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ.

ಕಾಂಗ್ರೆಸ್‌ನ ಹಿರಿಯ ನಾಯಕರು ರಾಜೀನಾಮೆ ವಾಪಸ್ ಪಡೆದು ಪಕ್ಷದಲ್ಲಿರುವಂತೆ ಕೋರಿದ್ದಾರೆ. ರಾಜ್ಯದ ಉದ್ದಗಲಕ್ಕೂ ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ವಾಪಸ್ ಪಡೆಯಲು ಮನವಿ ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ನಾನು ಕಾಂಗ್ರೆಸ್‌ನಲ್ಲೇ ಮುಂದುವರಿಯಲು ತೀರ್ಮಾನಿಸಿದ್ದು, ಪಕ್ಷದಲ್ಲಿ ಮುಂದುವರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *