More

    ರಾಣಿ ಚನ್ನಮ್ಮ ಸ್ತ್ರೀಕುಲಕ್ಕೆ ಮಾದರಿ

    ಬಳ್ಳಾರಿ : ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಭಾರತೀಯರಲ್ಲಿ ಕಿತ್ತೂರಿನ ರಾಣಿ ಚನ್ನಮ್ಮ ಒಬ್ಬರು. ಸ್ತ್ರೀಕುಲಕ್ಕೆ ಅವರು ಮಾದರಿ ಎಂದು ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಹೇಳಿದರು.

    ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ಹೊಂಗಿರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಚನ್ನಮ್ಮ ಅವರು 1778ರ ಅಕ್ಟೋಬರ್ 23 ರಂದು ಬೆಳಗಾವಿ ಜಿಲ್ಲೆಯ ಕಾಕತಿ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದವರು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ದಂಗೆ ಏಳುವಂತೆ ಮಾಡಿ, ಅನೇಕ ಮಹಿಳೆಯರಲ್ಲಿ ಧೈರ್ಯ ತುಂಬಿದ ವೀರ ಮಹಿಳೆ. ದೇಶದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಅವರ ಕೊಡುಗೆ ಅಪಾರ ಎಂದು ತಿಳಿಸಿದರು.

    ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ.ಸಿದ್ದಲಿಂಗಪ್ಪ ಮಾತನಾಡಿ, ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚರಿತ್ರೆಯಲ್ಲಿ ಕಿತ್ತೂರಿನ ರಾಣಿ ಚನ್ನಮ್ಮ ಅವರು ತಮ್ಮ ಅಸಾಧಾರಣ ಧೈರ್ಯ ಸಾಹಸಗಳಿಂದ ಅಜರಾಮರರಾಗಿದ್ದಾರೆ. ಬ್ರಿಟಿಷರ ಕುತಂತ್ರವನ್ನೆದುರಿಸಿ ಅವರ ವಿರುದ್ಧ ಹೋರಾಡಿದ ಅವರ ಪರಾಕ್ರಮದ ಬಗ್ಗೆ ಇವತ್ತಿಗೂ ನಮ್ಮ ನಾಡಿನ ಮೂಲೆಮೂಲೆಗಳಲ್ಲೂ ಅವರನ್ನು ಸ್ಮರಿಸುತ್ತಿದ್ದಾರೆ ಎಂದು ಹೇಳಿದರು.

    ಇದೇ ವೇಳೆ ನಗರದ ಮೋಕಾ ರಸ್ತೆಯ ಕೆಇಬಿ ವೃತ್ತದ ಬಳಿ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಅವರ ಪುತ್ಥಳಿ ಪ್ರತಿಷ್ಠಾಪನೆ, ವೃತ್ತಕ್ಕೆ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಸಮಾಜದ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

    ಪಾಲಿಕೆ ಉಪ ಮೇಯರ್ ಬಿ.ಜಾನಕಿ, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ, ಪಾಲಿಕೆ ಸದಸ್ಯ ಪಿ.ಗಾದೆಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಚೋರನೂರು ಕೊಟ್ರಪ್ಪ, ಮುಖಂಡರಾದ ಶಿವಕುಮಾರ, ಕಲ್ಲುಕಂಭ ಪಂಪಾಪತಿ, ಡಾ.ಸೋಮಶೇಖರ ರೆಡ್ಡಿ, ಹಾವಿನಾಳ ಶರಣಪ್ಪ, ಅಸುಂಡಿ ನಾಗರಾಜ, ಕೋಳೂರು ಚಂದ್ರೇಗೌಡ, ಮುಕ್ಕಣ್ಣ, ನೀಲನಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts