More

    ಡಬಲ್ ಇಂಜಿನ್ ಸರ್ಕಾರದಿಂದ ರೈತರ ನಿರ್ಲಕ್ಷ್ಯ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆರೋಪ

    ಮದ್ದೂರು: ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ರೈತರು, ದುಡಿಯುವ ವರ್ಗದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಆಡಳಿತ ಮಾಡುತ್ತಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಕಿಡಿಕಾರಿದರು.
    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕಬ್ಬಿಗೆ ಎಸ್‌ಎಪಿ ಬೆಲೆ , ಹಾಲಿಗೆ ಪ್ರೋತ್ಸಾಹ ಧನ, ಭತ್ತಕ್ಕೆ ಕ್ವಿಂಟಾಲ್‌ಗೆ 500 ರೂ. ಸಹಾಯ ಧನ ನೀಡಬೇಕು ಎಂದು ಮಂಡ್ಯ ನಗರದಲ್ಲಿ ರೈತ ಸಂಘದ ವತಿಯಿಂದ 109 ದಿನ ಅಹೋರಾತ್ರಿ ಧರಣಿ ಮಾಡಿದರೂ ಸರ್ಕಾರ ಸಮಸ್ಯೆ ಬಗೆಹರಿಸುವುದಕ್ಕೆ ಪ್ರಯತ್ನ ಮಾಡಲಿಲ್ಲ. ರೈತರ ಪರ ಎಂದು ಸರ್ಕಾರ ಸುಳ್ಳು ಹೇಳಿಕೊಂಡು ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು.
    ಬೇಡಿಕೆ ಈಡೇರಿಕೆಗಾಗಿ ಕೇಂದ್ರದ ಗೃಹ ಸಚಿವರು ಹಾಗೂ ಪ್ರಧಾನಮಂತ್ರಿ ಕರ್ನಾಟಕಕ್ಕೆ ಬಂದ ಸಂದರ್ಭದಲ್ಲಿ ಪ್ರತಿಭಟನೆ ಮಾಡುವುದಾಗಿ ರೈತ ಸಂಘದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ. ಅದರಂತೆ ಮಾ.12ರಂದು ಜಿಲ್ಲೆಗೆ ಪ್ರಧಾನಿ ಭೇಟಿ ನೀಡುತ್ತಿದ್ದು, ಅಂದು ಪ್ರತಿಭಟನೆ ಮಾಡಲಾಗುವುದು. ಪ್ರತಿಭಟನೆ ಯಾವ ರೂಪದಲ್ಲಿ ಮಾಡಬೇಕೆಂದು ಸಮಿತಿ ರಚಿಸಲಾಗುತ್ತದೆ. ಬುಧವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ನಾವು ಸಭೆಯಲ್ಲಿ ಪಾಲ್ಗೊಂಡು ನಮ್ಮ ಬೇಡಿಕೆಗಳನ್ನು ತಿಳಿಸುತ್ತೇವೆ. ಒಂದು ವೇಳೆ ಬೇಡಿಕೆ ಈಡೇರಿಸದಿದ್ದಲ್ಲಿ ಪ್ರಧಾನಿ ಆಗಮಿಸುವ ಸಂದರ್ಭದಲ್ಲಿ ಅಹಿಂಸಾ ಮಾರ್ಗದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಧಿಕ್ಕಾರ ಕೂಗಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಮಂಡ್ಯ, ರಾಮನಗರ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಂದ ಸಾವಿರಾರು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
    ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪುಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಧುಚಂದನ್, ಸರ್ವೋದಯ ಕರ್ನಾಟಕ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನಗೌಡ, ಬೆಂಗಳೂರು ವಿಭಾಗದ ಉಪಾಧ್ಯಕ್ಷ ರಾಮೇಗೌಡ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts