More

    ರೈತರ ಅನಿರ್ದಿಷ್ಟಾವಧಿ ಧರಣಿ: ಕಬ್ಬು, ಹಾಲಿಗೆ ದರ ನಿಗದಿಗೆ ಆಗ್ರಹ

    ಮಂಡ್ಯ: ಪ್ರತಿ ಟನ್ ಕಬ್ಬಿಗೆ 4,500 ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ 40 ರೂ. ನಿಗದಿ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
    ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ನಡೆಸುತ್ತಿರುವ ರೈತ ಸಂಘದ ಕಾರ್ಯಕರ್ತರು, ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಧರಣಿ ಹಿಂಪಡೆಯುವ ಪ್ರಶ್ನೆಯೇ ಇಲ್ಲವೆಂದು ಎಚ್ಚರಿಕೆ ನೀಡಿದರು. ಪ್ರತಿ ಟನ್ ಕಬ್ಬಿಗೆ 4500 ರೂ. ನಿಗದಿ ಪಡಿಸುವಂತೆ ಆಗ್ರಹಿಸಿ ಮೈಸೂರು ದಸರಾಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೆ ರಾಜ್ಯ ಸರ್ಕಾರ ಎಸ್‌ಎಪಿ ನಿಗದಿಪಡಿಸಿಲ್ಲ. ಜತೆಗೆ, ಕೊಟ್ಟ ಮಾತಿಗೆ ತಪ್ಪಿದೆ. ಈ ಹಿನ್ನೆಲೆಯಲ್ಲಿ ಧರಣಿ ಆರಂಭಿಸಲಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.
    ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಮಾತನಾಡಿ, ಸರ್ಕಾರ ಕಬ್ಬಿಗೆ ಎಸ್‌ಎಪಿ ನಿಗದಿಪಡಿಸುವವರೆಗೂ ಅನಿರ್ದಿಷ್ಟಾವಧಿ ಚಳವಳಿ ಮುಂದುವರಿಯಲಿದೆ. ನಮ್ಮ ಚಳವಳಿಗೆ ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ಹೋರಾಟ ಬೇರೆ ರೂಪ ಪಡೆಯುತ್ತದೆ. ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯೂ ಕಬ್ಬಿನ ದರದ ಬಗ್ಗೆ ಈವರೆಗೂ ಮಾತನಾಡಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಇವರಿಗೆ ಅರಿವಿಲ್ಲವೇ ಎಂದು ಹರಿಹಾಯ್ದರು.
    ಮಾತೆತ್ತಿದರೆ ನಾವು ರೈತರ ಮಕ್ಕಳು ಎನ್ನುತ್ತಾರೆ. ರೈತರ ಮಕ್ಕಳ ಸಮಸ್ಯೆಗಳ ಬಗ್ಗೆ ಏಕೆ ಸರ್ಕಾರದ ಗಮನಕ್ಕೆ ತರುತ್ತಿಲ್ಲ? ಜಿಲ್ಲೆಯಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸದೆ ವೈಯಕ್ತಿಕ ಪ್ರತಿಷ್ಠೆಗಾಗಿ ಒಬ್ಬರ ಮೇಲೆ ಇನ್ನೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಪ್ರತಿಭಟನೆಯಲ್ಲಿ ರೈತ ಸಂಘದ ವರಿಷ್ಠೆ ಸುನೀತಾ ಪುಟ್ಟಣ್ಣಯ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್, ಪ್ರಸನ್ನ ಎನ್.ಗೌಡ, ಕೆ.ಪಿ.ಗೋವಿಂದೇಗೌಡ, ಮಂಡ್ಯ ತಾಲೂಕು ರೈತ ಸಂಘದ ಅಧ್ಯಕ್ಷ ಶಿವಳ್ಳಿ ಚಂದ್ರು, ಖಜಾಂಚಿ ಶೆಟ್ಟಹಳ್ಳಿ ರವಿಕುಮಾರ್, ಶಿವಳ್ಳಿ ಬೋರೇಗೌಡ, ರಘು, ಮಂಜುನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts