More

    ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತುಮಕೂರು ಜಿಲ್ಲೆ ಸಜ್ಜು

    ತುಮಕೂರು: ಕರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತುಕೊಡಲಾಗಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

    ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಒಟ್ಟು 37317 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ತುಮಕೂರಿನ 7 ಬ್ಲಾಕ್ ಪರೀಕ್ಷಾ ಕೇಂದ್ರ ಸೇರಿ ಒಟ್ಟು 92 ಹಾಗೂ ಮಧುಗಿರಿಯ 9 ಬ್ಲಾಕ್ ಪರೀಕ್ಷಾ ಕೇಂದ್ರ ಸೇರಿ ಒಟ್ಟು 68 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು.

    ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮೂಲಕ ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ 3 ದಿನಗಳ ಮುನ್ನ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಗುವುದು. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ಒಳಗೆ ಪ್ರವೇಶಿಸುವ ಪ್ರದೇಶ ಹಾಗೂ ಪರೀಕ್ಷಾ ಕೊಠಡಿಗಳಲ್ಲೂ ಪರಸ್ಪರ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಲಾಗುವುದು. ಪ್ರತೀ ಕೊಠಡಿಯಲ್ಲಿ ಗರಿಷ್ಠ 18 ರಿಂದ 20 ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಹೇಳಿದರು.

    ಜಿಪಂ ಸಭಾಂಗಣದಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿ, ಜೂ.25 ರಿಂದ ಪರೀಕ್ಷೆ ನಡೆಯಲಿದ್ದು, ಕಂಟೇನ್ಮೆಂಟ್ ವಲಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು. ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಸರ್ಕಾರ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಯಾವುದೇ ಪರೀಕ್ಷಾ ಕೇಂದ್ರವನ್ನು ಕ್ವಾರೆಂಟೈನ್ ಕೇಂದ್ರವನ್ನಾಗಿ ಬಳಸಲಾಗುವುದಿಲ್ಲ ಎಂದು ತಿಳಿಸಿದರು.

    ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವ ಅಥವಾ ಕಂಟೇನ್ಮೆಂಟ್ ವಲಯದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 2 ವಿಶೇಷ ಕೊಠಡಿಗಳನ್ನು ಕಾಯ್ದಿರಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಸಾಕಷ್ಟು ಕೊಠಡಿಗಳ ಲಭ್ಯತೆಯಿಲ್ಲದಿದ್ದರೆ ಸಮೀಪದ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿಗಳನ್ನು ಬ್ಲಾಕ್ ಕೇಂದ್ರಗಳೆಂದು ಘೋಷಿಸಿ ಬಳಸಿಕೊಳ್ಳಬೇಕು. ಪ್ರತಿ ತಾಲೂಕಿನ ಕೇಂದ್ರ ಹಾಗೂ ಜಿಲ್ಲಾ ಕೇಂದ್ರಸ್ಥಾನಗಳಲ್ಲಿ ಕನಿಷ್ಠ 2 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಕಾಯ್ದಿರಿಸಲು ಸೂಚಿಸಲಾಗಿದೆ ಎಂದರು.
    ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಡಿಡಿಪಿಐಗಳಾದ ಎಂ.ಆರ್. ಕಾಮಾಕ್ಷಿ, ರೇವಣ್ಣಸಿದ್ದಪ್ಪ, ಜಿಪಂ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಡಯಟ್ ಪ್ರಾಂಶುಪಾಲ ಮಂಜುನಾಥ, ಡಿಎಚ್‌ಒ ಡಾ.ನಾಗೇಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

    ಆರೋಗ್ಯ ತಪಾಸಣಾ ಕೌಂಟರ್: ಪ್ರತೀ ಪರೀಕ್ಷಾ ಕೇಂದ್ರದಲ್ಲಿ 200 ಮಕ್ಕಳಿಗೆ ಒಂದರಂತೆ ಆರೋಗ್ಯ ತಪಾಸಣಾ ಕೌಂಟರ್ ಅನ್ನು ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ಸ್ಥಾಪಿಸಬೇಕು. ಆರೋಗ್ಯ ಸಿಬ್ಬಂದಿ ನೇಮಿಸಬೇಕು. ವಿದ್ಯಾರ್ಥಿ ಸೇರಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವ ಪ್ರತಿಯೊಬ್ಬ ಅಧಿಕೃತ ವ್ಯಕ್ತಿಯನ್ನು ಆರೋಗ್ಯ ತಪಾಸಣೆಗೊಳಪಡಿಸಿ ಕೈಗಳನ್ನು ಸ್ಯಾನಿಟೈಸ್ ಮಾಡಿ, ಮಾಸ್ಕ್ ಧರಿಸಿರುವ ಬಗ್ಗೆ ಖಾತ್ರಿಪಡಿಸಿಕೊಂಡ ನಂತರವೇ ಪ್ರವೇಶಕ್ಕೆ ಅನುಮತಿ ನೀಡುವಂತೆ ರಾಕೇಶ್ ಕುಮಾರ್ ತಿಳಿಸಿದರು.

    ಸಾರಿಗೆ ಬಸ್ ವ್ಯವಸ್ಥೆ: ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸುಗಮ ರಸ್ತೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಶಾಲೆಯ ಮುಖ್ಯಸ್ಥರು ಎಲ್ಲಾ ವಿದ್ಯಾರ್ಥಿಗಳೊಂದಿಗೆ ಸಮನ್ವಯ ಸಾಧಿಸಿ ಸಾರಿಗೆ ವ್ಯವಸ್ಥೆಯ ಬೇಡಿಕೆಗಳನ್ನು ಕ್ರೋಡೀಕರಿಸಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಲುಪಿಸಬೇಕು. ಅಲ್ಲದೆ, ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಯಾವುದೇ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥೆ ಅಥವಾ ಜಿಲ್ಲಾಡಳಿತ ಕಲ್ಪಿಸುವ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಮಕ್ಕಳನ್ನು ಕರೆದೊಯ್ಯುವ ಬಸ್ಸುಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts