ನಾಳೆಯಿಂದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಉತ್ತರ ಕರ್ನಾಟಕದಲ್ಲೂ ಬಿರುಸು

gggg
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ನಗರ ಸೇರಿ ರಾಜ್ಯದಲ್ಲೆಡೆ ಭಾನುವಾರವೂ ವರುಣಾರ್ಭಟ ಮುಂದುವರಿದಿತ್ತು. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ವ್ಯಾಪ್ತಿಯ ಪ್ರದೇಶಗಳಲ್ಲಿ ಮುಂದಿನ 3-4 ದಿನ ಇನ್ನಷ್ಟು ಜೋರಾಗಿ ವರ್ಷಧಾರೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆ.18ರಿಂದ ಆ.19 ರವರೆಗ ಭಾರಿ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ 201 ಮಿಮೀವರೆಗೆ ಮಳೆಯಾಗುವ ಸಂಭವ ಇದೆ. ಗಂಟೆಗೆ 60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿರುವ ಕಾರಣ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಂತೆ ಇಲಾಖೆ, ಮೀನುಗಾರರಿಗೆ ಎಚ್ಚರಿಕೆ ಕೊಟ್ಟಿದೆ.

ಹಾಸನ, ಕೊಡಗು,ಬೆಳಗಾವಿ, ಹಾವೇರಿ, ವಿಜಯಪುರದಲ್ಲಿ ಮುಂದಿನ 3 ದಿನ ಹಾಗೂ ಬೀದರ್, ಧಾರವಾಡ, ಗದಗ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರಿನಲ್ಲಿ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರು ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 48 ಗಂಟೆ ಮೋಡ ಕವಿದ ವಾತಾವರಣ ಇರಲಿದ್ದು,ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಮತ್ತು 20 ಡಿ.ಸೆ. ದಾಖಲಾಗಲಿದೆ.

ಆಂಧ್ರಪ್ರದೇಶ ಮತ್ತು ಓರಿಸ್ಸಾದ ಕರಾವಳಿ ತೀರದಲ್ಲಿ ವಾಯಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ರಭಸದಿಂದ ಮಳೆಯಾಗಲಿದೆ. ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಮಳೆ ತೀವ್ರತೆ ತುಸು ಜೋರಾಗಿ ಇರಲಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ವ್ಯಾಪಕವಾಗಿ ಸುರಿದರೆ, ದಕ್ಷಿಣ ಕರ್ನಾಟಕದಲ್ಲಿ ಹಗುರದಿಂದ ಕೂಡಿದ ಸಾಧಾರಣ ವರ್ಷಧಾರೆಯಾಗಲಿದೆ.

| ಸಿ.ಎಸ್.ಪಾಟೀಲ್, ರಾಜ್ಯ ಹವಮಾನ ಇಲಾಖೆ ನಿರ್ದೇಶಕ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net