More

    ಕಾಂಗ್ರೆಸ್ ಸರ್ಕಾರದಿಂದ ಸೌಲಭ್ಯ ಕಡಿತ

    ಕೋಲಾರ: ರಾಜ್ಯದ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ರೂಪಿಸಿದ್ದ ಯೋಜನೆಗಳನ್ನು ರಾಜ್ಯ ಸರ್ಕಾರ ಕಡಿತಗೊಳಿಸಿ, ಸಾರ್ವಜನಿಕರನ್ನು ಸೌಲಭ್ಯಗಳಿಂದ ವಂಚಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಆರೋಪಿಸಿದರು.

    ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ತೀವ್ರ ಬರ ಪರಿಸ್ಥಿತಿಯ ನಡುವೆಯೂ ರೈತರ ನೆರವಿಗೆ ಧಾವಿಸುತ್ತಿಲ್ಲ ಎಂದು ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ರೈತ ಮೋರ್ಚಾದಿಂದ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ದೂರಿದರು.
    ಬಿಜೆಪಿ ಸರ್ಕಾರದ ಅವಽಯಲ್ಲಿ ರೈತರ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಕಡಿತಗೊಳಿಸಿ, ಈ ಯೋಜನೆ ಅನುದಾನವನ್ನು ಗ್ಯಾರಂಟಿಗಳಿಗೆ ವಿನಿಯೋಗಿಸಿಕೊಳ್ಳಲಾಗುತ್ತಿದೆ ಎಂದರು.
    ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ೫ ಗ್ಯಾರಂಟಿಗಳಿಗೆ ಹಣ ಎಲ್ಲಿಂದ ತರಲಾಗುತ್ತದೆ ಎಂದು ಪ್ರಶ್ನಿಸಿದಾಗ ಕೈ ನಾಯಕರು ಉತ್ತರ ನೀಡಲಿಲ್ಲ. ಆದರೆ ಈಗ ಜನರ ಕಲ್ಯಾಣಕ್ಕಾಗಿ ಜಾರಿಗೆ ತರಲಾಗಿದ್ದ ಯೋಜನೆಗಳನ್ನು ಕಡಿತಗೊಳಿಸಿ ವಂಚಿಸುತ್ತಿದ್ದಾರೆ ಎಂದು ಟೀಕಿಸಿದರು.
    ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು ಕುಡಿಯುವ ನೀರಿನ ಸಮಸ್ಯೆ ಭೀಕರವಾಗುತ್ತಿದೆ. ರೈತರು ಕಂಗಾಲಾಗಿದ್ದಾರೆ. ಅವರ ನೆರವಿಗೆ ಧಾವಿಸದ ಕಾಂಗ್ರೆಸ್ ನಾಯರು, ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯಕ್ಕೆ ಬರಬೇಕಾಗಿರುವ ಪಾಲು ಕೇಂದ್ರದಿಂದ ಬಿಡುಗಡೆಯಾಗಿದೆ. ಆ ಹಣವನ್ನು ಯಾವುದಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
    ಬಿಜೆಪಿ ರೈತ ಮೊರ್ಚಾ ಜಿಲ್ಲಾಧ್ಯಕ್ಷ ಆನಂದ್ ಮಾತನಾಡಿ, ರಾಜ್ಯದಲ್ಲಿ ರೈತರಿಗೆ ಭದ್ರತೆ ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರೆಯುತ್ತಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.
    ಬಿಜೆಪಿ ಜಿಲ್ಲಾ ವಕ್ತಾರ ಎಸ್.ಬಿ.ಮುನಿವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಅಪ್ಪಿರಾಜು, ಲೋಕಸಭೆ ಕ್ಷೇತ್ರದ ಸಂಚಾಲ ಮಾಗೇರಿ ನಾರಾಯಣಸ್ವಾಮಿ, ಮಾದ್ಯಮ ಪ್ರಮುಖ್ ಪ್ರವೀಣ್ ಗೌಡ, ಸಹ ಸಂಚಾಲಕ ಕೆಂಬೋಡಿ ನಾರಾಯಣಸ್ವಾಮಿ,ಮುಖಂಡರಾದ ರಾಜೇಶ್ ಸಿಂಗ್, ಸಿ.ಡಿ.ರಾಮಚಂದ್ರ, ಪಾರ್ಥ ಸಾರತಿ, ರೋಣೂರು ಚಂದ್ರಶೇಖರ್, ಲಕ್ಷ್ಮಣ್ ಗೌಡ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts