ಬೆಂಗಳೂರು: ನೆಚ್ಚಿನ ನಟ ದರ್ಶನ್ಗೋಸ್ಕರ ರೇಣುಕಾಸ್ವಾಮಿಯನ್ನು ಹುಡುಕಿದ್ದ ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ಹಾಗೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ4 ಆರೋಪಿಯಾಗಿರುವ ರಘು ಅವರ ತಾಯಿ ಕೊನೆಯುಸಿರೆಳೆದಿದ್ದಾರೆ.
ಮಂಜುಳಮ್ಮ (65) ಮೃತ ದುರ್ದೈವಿ. ಚಿತ್ರದುರ್ಗದ ಕೋಳಿ ಬುರುಜನಹಟ್ಟಿ ನಿವಾಸದಲ್ಲಿ ಇಂದು (ಜುಲೈ 20) ಬೆಳಗಿನ ಜಾವ ಸಾವಿಗೀಡಾದರು. ಒಂದೆಡೆ ಅನಾರೋಗ್ಯ ಇನ್ನೊಂದೆಡೆ ಮಗ ಜೈಲು ಸೇರಿದ ನೋವಿನಲ್ಲಿ ಕೊರಗಿ… ಕೊರಗಿ ಕೊನೆಗೆ ಮಂಜುಳಮ್ಮ ತಮ್ಮ ಪ್ರಾಣವನ್ನೇ ಬಿಟ್ಟಿದ್ದಾರೆ. ಇದ್ದೊಬ್ಬ ಮಗ ಈ ರೀತಿ ಜೈಲುಪಾಲಾಗುತ್ತಾನೆ ಅಂತ ಇಡೀ ಕುಟುಂಬ ಕನಸು-ಮನಸಿನಲ್ಲೂ ಎಣಿಸಿರಲಿಲ್ಲ. ನಟ ದರ್ಶನ್ ಸೂಚನೆ ನೀಡಿದರು ಅಂತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಲ್ಲಿ ಹುಡುಕಿ ಕರೆತರುವ ಮೂಲಕ ಕೊಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ. ವಿಚಾರಾಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಅತ್ತ ಕುಟುಂಬವೂ ಕೂಡ ಸಂಕಷ್ಟದಲ್ಲಿದೆ. ಇದೇ ಕೊರಗಿನಲ್ಲಿ ತಾಯಿ ಮಂಜುಳಮ್ಮ ಅಸುನೀಗಿದ್ದಾರೆ.
ಇನ್ನು ಇದೇ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿ ಅನಿಲ್ ಎಂಬಾತನ ತಂದೆ ಕೆಲ ದಿನಗಳ ಹಿಂದಷ್ಟೇ ಪ್ರಾಣ ಕಳೆದುಕೊಂಡಿದ್ದಾರೆ. ಮಗ ಜೈಲು ಸೇರಿದನೆಂಬ ನೋವಿನಿಂದಲೇ ಪ್ರಾಣ ಬಿಟ್ಟರು. ಇದೀಗ ರಘು ತಾಯಿ ಕೊನೆಯುಸಿರೆಳೆದಿದ್ದಾರೆ. ಇನ್ನು ಕೆಲ ಕುಟುಂಬಗಳು ಕಣ್ಣೀರಿನಲ್ಲೇ ನಿತ್ಯವೂ ಕೈತೊಳೆಯುತ್ತಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಆರೋಪಿಗಳ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೊಲೆಯಾದ ರೇಣುಕಾಸ್ವಾಮಿ, ಆರೋಪಿ ಪವಿತ್ರಾ ಗೌಡ ಸೇರಿದಂತೆ ಅನೇಕ ನಟಿಯರಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಆರೋಪವಿದೆ. ಹೀಗಾಗಿ ಆತನ ಇನ್ಸ್ಟಾಗ್ರಾಂ ಖಾತೆ ಮತ್ತು ವಾಟ್ಸ್ಆ್ಯಪ್ ಖಾತೆಯ ಡೇಟಾವನ್ನು ಮರಳಿ ಪಡೆಯುವ ಪ್ರಯತ್ನವನ್ನು ಪೊಲೀಸರು ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದ ಪಟ್ಟಣಗೆರೆ ಶೆಡ್ ಸುತ್ತಮುತ್ತಲಿಗೆ ಸಿಸಿಟಿವಿ ಕ್ಯಾಮೆರಾಗಳ ಡಿವಿಆರ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಬರ್ ತಜ್ಞರು ಪರಿಶೀಲಿಸಿ ದತ್ತಾಂಶವನ್ನು ಸಂಗ್ರಹಿಸಿಕೊಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಸಾಕಷ್ಟು ಸಾಕ್ಷಿಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ.
ಜುಲೈ 18ರಂದು ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಯಲ್ಲಿ ದರ್ಶನ್ ಮತ್ತು ಇನ್ನಿತರ ಆರೋಪಿಗಳನ್ನು ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಮತ್ತೊಮ್ಮೆ 14 ದಿನಗಳ ಕಾಲ ಅಂದರೆ ಆಗಸ್ಟ್ 1ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ. ಇನ್ನೊಂದೆಡೆ ನಟ ದರ್ಶನ್ ಮನೆಯೂಟಕ್ಕೆ ಅನುಮತಿ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಿ ಎಂದಿರುವ ನ್ಯಾಯಾಲಯ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ?
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್ ಕೈವಾಡ ಇದೆ. ದರ್ಶನ್ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.
ಪೊಲೀಸರ ಕೈ ಸೇರಿದ ರೇಣುಕಾಸ್ವಾಮಿ ಮರಣೋತ್ತರ ವರದಿಯಲ್ಲಿ ಆಘಾತಕಾರಿ ಸಂಗತಿ ಬಯಲು!
ಕೊನೆಗೂ ಹಾರ್ದಿಕ್ ಪಾಂಡ್ಯ-ನತಾಶಾ ಡಿವೋರ್ಸ್ ಹಿಂದಿನ ಅಸಲಿ ಕಾರಣ ಬಯಲು! ಆಪ್ತರು ಬಿಚ್ಚಿಟ್ಟ ರಹಸ್ಯವಿದು…
ಹೇಗಿದ್ದ ಅಮಲಾ ಹೇಗಾದ್ರು ನೋಡಿ! ಸೌತ್ ಬ್ಯೂಟಿಯ ಹೊಸ ಅವತಾರ ಕಂಡು ಫ್ಯಾನ್ಸ್ ಶಾಕ್