ಮನೆ ಬಾಗಿಲಿಗೇ ಬಂದು ಶಾಲೆಗೆ ಹೋಗದ ಮಕ್ಕಳ ಗುರುತಿಸುವಿಕೆ; ಏ.30ರೊಳಗೆ ಹೊರಗುಳಿದ ಮಕ್ಕಳ ಸಮೀಕ್ಷೆ

27ckd6-Web
ಚಿಕ್ಕೋಡಿ ತಾಲೂಕಿನ ಜೋಡಕುರಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹೈಸ್ಕೂಲ್ ವಿದ್ಯಾರ್ಥಿಗಳು ಶಾಲೆಯಿಂದ ಹೊರಬರುತ್ತಿರುವುದನ್ನು ಕಾಯುತ್ತ ಹೊರಗೆ ಕುಳಿತಿರುವುದು.
Published on

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009(ಆರ್​ಟಿಇ ಕಾಯ್ದೆ) ಹಾಗೂ ‘ಕರ್ನಾಟಕ ಮಕ್ಕಳ ಕಡ್ಡಾಯ ಹಾಗೂ ಉಚಿತ ಶಿಕ್ಷಣ ಹಕ್ಕು ನಿಯಮಗಳು-2012’ರ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂಬರುವ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಕಡ್ಡಾಯವಾಗಿ ಮನೆ-ಮನೆ ಸಮೀಕ್ಷೆಯನ್ನು 2020ರ ಏ.30ರೊಳಗೆ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಮಕ್ಕಳ ವಿಚಾರ ಕುರಿತು ಹೈಕೋರ್ಟ್ 2013ರಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ವಿಚಾರವಾಗಿ ಸರ್ಕಾರಕ್ಕೆ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದೆ. ಆರ್​ಟಿಇ ಪರಿಣಾಮಕಾರಿ ಅನುಷ್ಠಾನಗೊಳ್ಳಬೇಕು ಹಾಗೂ ಎಲ್ಲಾ ಮಕ್ಕಳಿಗೆ ಉಚಿತ ಶಿಕ್ಷಣ ಕಡ್ಡಾಯವಾಗಿ ಸಿಗುವಂತಾಗಬೇಕು ಎಂದರೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ನಿಖರವಾಗಿ ಗೊತ್ತಿರಬೇಕು. ಕಾಯ್ದೆ ಪ್ರಕಾರ ಆಯಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 0-14 ವರ್ಷದ ಮಕ್ಕಳ ಮಾಹಿತಿ ಸಂಗ್ರಹಿಸಬೇಕು. ಇದಕ್ಕಾಗಿ ಮನೆ-ಮನೆ ಸಮೀಕ್ಷೆ ನಡೆಸಿ ಆ ದಾಖಲೆಗಳನ್ನು ನಿರ್ವಹಿಸುವ ಜವಾಬ್ದಾರಿ ಎಲ್ಲ ಸ್ಥಳೀಯ ಸಂಸ್ಥೆಗಳ ಮೇಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಮನೆ-ಮನೆ ಸಮೀಕ್ಷೆ ಕಾರ್ಯಕ್ಕೆ ಸ್ವಸಹಾಯ ಗುಂಪುಗಳು ಹಾಗೂ ಎನ್​ಜಿಒಗಳನ್ನು ಬಳಸಿ ಕೊಳ್ಳಬಹುದು ಎಂದು ನ್ಯಾಯಪೀಠ ಸೋಮವಾರ ಸ್ಪಷ್ಟ ನಿರ್ದೇಶನ ನೀಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net