

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ದ.ಕ ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳ ಅನುಕೂಲತೆ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನೈಾಕ್ ಉಳಿಪ್ಪಾಡಿಗುತ್ತು ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪುಂಜಾಲಕಟ್ಟೆಯಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ನಾರಾಯಣಗುರು ವಸತಿ ಶಾಲೆಯ ಕಟ್ಟಡ ಪರಿಶೀಲಿಸಿ ಸುದ್ದಿಗಾರರ ಜತೆ ಮಾತನಾಡಿದರು.
ಹಾಲಿ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ವಸತಿ ಕೊರತೆಯಿದ್ದು, ಈಗಾಗಿ ಸ್ಥಳಾಂತರ ತುರ್ತು ಅಗತ್ಯ. ಆದ್ದರಿಂದ ಶೀಘ್ರವಾಗಿ ಪೂಜೆ ನೆರವೇರಿಸಿ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ನಿರ್ದೇಶನ ನೀಡಿದರು.
ಮೇಲ್ದರ್ಜೆಗೇರಿರುವ ಪುಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ 12 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗುವ ಕಟ್ಟಡವನ್ನು ಪರಿಶೀಲಿಸಿ, ಕಾಮಗಾರಿಗಳ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಅವರಿಂದ ಮಾಹಿತಿ ಪಡೆದುಕೊಂಡರು. ಬಂಟ್ವಾಳ ಹಾಗೂ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾಗಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕೆಂಬುದು ಈ ಭಾಗದ ಮುಖಂಡ ತುಂಗಪ್ಪ ಬಂಗೇರ ಹಾಗೂ ಸಾರ್ವಜನಿಕರ ಒತ್ತಾಯವಾಗಿದ್ದು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ರಾಜ್ಯ ಆರೋಗ್ಯ ಸಚಿವರು ಬಂಟ್ವಾಳಕ್ಕೆ ಭೇಟಿ ನೀಡಿದ ವೇಳೆ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಆದೇಶಿಸುವ ಜತೆಗೆ ಬಳಿಕ ಅನುದಾನ ನೀಡಿದ್ದರು ಎಂದು ತಿಳಿಸಿದರು.
ಜಿ.ಪಂ. ಸದಸ್ಯ ಎಂ.ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾಪಂ ಅಧ್ಯಕ್ಷೆ ಶಾರದಾ, ಕಾವಳಮೂಡೂರು ಗ್ರಾಪಂ ಅಧ್ಯಕ್ಷ ಅಜಿತ್ ಕಾರಿಂಜ, ಪಿಲಾತಬೆಟ್ಟು ಗ್ರಾಪಂ ಸದಸ್ಯರಾದ ಹರ್ಷಿಣಿ ಪುಷ್ಪಾನಂದ, ಕಾಂತಪ್ಪ ಕರ್ಕೇರ, ರಾಯಿ ಗ್ರಾಪಂ. ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಮಾಧ್ಯಮ ಸಂಚಾಲಕ ಪುರುಷೋತ್ತಮ ಶೆಟ್ಟಿ ವಾಮದಪದವು, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕಮಂಗಿಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್, ವಿಸ್ತರಣಾಧಿಕಾರಿ ಎಸ್.ಆರ್.ನಾಯಕ್, ವಸತಿ ಶಾಲೆ ಪ್ರಾಂಶುಪಾಲ ಸಂತೋಷ್ ಸನಿಲ್, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಿತೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಹುಟ್ಟುಹಬ್ಬ ಆಚರಣೆ
ಶುಕ್ರವಾರ ಬಂಟ್ವಾಳ ಶಾಸಕ ರಾಜೇಶ್ ನೈಾಕ್ ಅವರ ಜನ್ಮದಿನವಾಗಿದ್ದು, ನಾರಾಯಣಗುರು ವಸತಿ ಶಾಲೆಯ ಮಕ್ಕಳು ಕೇಕ್ ಕತ್ತರಿಸಿ ಶುಭಾಶಯ ಕೋರಿದರು.