

ವಾಷಿಂಗ್ಟನ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವ ವಿಚಾರದ ಬಗ್ಗೆ ಅಮೆರಿಕ ಪ್ರತಿಕ್ರಿಯೆ ನೀಡಿದೆ. ಭಾರತದ ನ್ಯಾಯಾಲಯದಲ್ಲಿರುವ ರಾಹುಲ್ ಗಾಂಧಿ ಪ್ರಕರಣವನ್ನು ಅಮೆರಿಕ ಗಮನಿಸುತ್ತಿದೆ ಎಂದು ಯುಎಸ್ ಡಿಪಾರ್ಟ್ಮೆಂಟ್ ಆಫ್ ಸ್ಟೇಟ್ ಪ್ರಿನ್ಸಿಪಲ್ನ ಉಪ ವಕ್ತಾರರಾದ ವೇದಾಂತ್ ಪಟೇಲ್ ಸೋಮವಾರ ತಿಳಿಸಿದ್ದಾರೆ.
ವಾಕ್ ಸ್ವಾತಂತ್ರ್ಯ ಸೇರಿದಂತೆ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಉಭಯ ರಾಷ್ಟ್ರಗಳು ಪರಸ್ಪರ ಬದ್ಧತೆಯ ಕುರಿತು ಅಮೆರಿಕವು, ಭಾರತ ಸರ್ಕಾರದೊಂದಿಗೆ ನಿರಂತರವಾಗಿ ತೊಡಗಿಸಿಕೊಂಡಿದೆ. ಕಾನೂನಿನ ನಿಯಮಗಳು ಮತ್ತು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ನೀಡುವ ಗೌರವವು ಯಾವುದೇ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ಭಾರತದ ಕೋರ್ಟ್ನಲ್ಲಿರುವ ರಾಹುಲ್ ಗಾಂಧಿ ಪ್ರಕರಣವನ್ನು ನಾವು ಗಮನಿಸುತ್ತಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಎದುರಾದ ರಾಹುಲ್ ಕುರಿತಾದ ಪ್ರಶ್ನೆಗೆ ವೇದಾಂತ್ ಪಟೇಲ್ ಪ್ರತಿಕ್ರಿಯಿಸಿದರು.
ಉಭಯ ರಾಷ್ಟ್ರಗಳ ಪ್ರಜಾಪ್ರಭುತ್ವಗಳನ್ನು ಬಲಪಡಿಸುವ ಕೀಲಿಯಾಗಿ ನಾವು ಪ್ರಜಾಪ್ರಭುತ್ವದ ತತ್ವಗಳ ಪ್ರಾಮುಖ್ಯತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ರಕ್ಷಣೆಯನ್ನು ಎತ್ತಿ ತೋರಿಸುವುದನ್ನು ನಾವು ಮುಂದುವರಿಸುತ್ತೇವೆ ಎಂದು ವೇದಾಂತ್ ಪಟೇಲ್ ಹೇಳಿದರು.
2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪ್ರಚಾರ ಮಾಡುವಾಗ ಮಾತನಾಡಿದ್ದ ರಾಹುಲ್, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.
2019ರಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯಿಂದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅಸಮಾಧಾನಗೊಂಡು ದೂರು ದಾಖಲಿಸಿದ್ದರು. 2019ರ ಏಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು, ಇದರ ಅಡಿಯಲ್ಲಿ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದರೆ, ಮೇಲ್ಮನವಿ ಸಲ್ಲಿಸಲು ರಾಹುಲ್ ಅವರಿಗೆ ನ್ಯಾಯಾಲಯ 30 ದಿನಗಳ ಕಾಲಾವಕಾಶ ನೀಡಿದೆ. ಆದರೆ, ಸಂಸತ್ತಿನ ಕಾರ್ಯದರ್ಶಿ ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ವಜಾಗೊಳಿಸಿದ್ದಾರೆ.
ಮಾನಹಾನಿ ಪ್ರಕರಣದಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್, 1951ರ ಜನಪ್ರತಿನಿಧಿ ಕಾಯ್ದೆ ಅಡಿಯಲ್ಲಿ 8 ವರ್ಷ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ. ಒಂದು ವೇಳೆ ಸೂರತ್ ನ್ಯಾಯಾಲಯ ನೀಡಿರುವ ತೀರ್ಪನ್ನು ಉನ್ನತ ನ್ಯಾಯಾಲಯ ವಜಾಗೊಳಿಸಿದರೆ ರಾಹುಲ್ ನಿರಾಳರಾಗಲಿದ್ದಾರೆ. ಇನ್ನು ರಾಹುಲ್ರನ್ನು ಅನರ್ಹಗೊಳಿಸಿರುವ ನಿರ್ಧಾರ ಕೇಂದ್ರದ ರಾಜಕೀಯ ದ್ವೇಷ ಎಂದು ಆರೋಪ ಮಾಡಿದ್ದಾರೆ. (ಏಜೆನ್ಸೀಸ್)