More

    ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಶಾಸಕ ಶ್ರೀನಿವಾಸ ಮಾನೆ ಸೂಚನೆ

    ಹಾನಗಲ್ಲ: ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಕೆರೆ-ಕಟ್ಟೆಗಳ ಜತೆಗೆ ಧರ್ಮಾ-ವರದಾ ನದಿ ತುಂಬಿ ಹರಿಯುತ್ತಿವೆ. ಇನ್ನಷ್ಟು ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿರುವ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಜಾಗೃತರಾಗಿರಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಸೂಚನೆ ನೀಡಿದರು.
    ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಮಳೆ, ಕೆರೆಗಳು, ನದಿಪಾತ್ರದ ಜನರ ಸಮಸ್ಯೆಗಳ ಕುರಿತು ಕಂದಾಯ, ಕೃಷಿ, ನೀರಾವರಿ, ಗ್ರಾಮೀಣ ಕುಡಿಯುವ ನೀರು ಸರಬರಾಜು, ಜಿಪಂ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
    ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಜನ-ಜಾನುವಾರುಗಳು ಅತ್ತ ಸಂಚರಿಸದಂತೆ ನದಿಪಾತ್ರದ ಗ್ರಾಮಗಳಲ್ಲಿ ಡಂಗುರ ಹಾಕಿಸಬೇಕು. ಮಳೆಯಿಂದಾಗಿ ಮನೆಗಳು ಬಿದ್ದರೆ, ಅಂಥ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅವರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಮಾನೆ ಸೂಚಿಸಿದರು.
    ಮಳೆಗಾಲದಲ್ಲಿ ಪ್ರತಿವರ್ಷ ಹಿರೇಹುಲ್ಲಾಳ, ಕೂಡಲ, ಚಿಕ್ಕೇರಿ ಹೊಸಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಸಮಸ್ಯೆ ಸೃಷ್ಟಿಸುತ್ತವೆ. ಈ ಗ್ರಾಪಂಗಳ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದುಕೊಳ್ಳಬೇಕು. ಕಾಲುವೆ ಒತ್ತುವರಿಯಿಂದ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಇದರಿಂದ ಹಲವು ಗ್ರಾಮಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆ ನೀರು ಜನವಸತಿ ಪ್ರದೇಶ ಮತ್ತು ಕೃಷಿ ಭೂಮಿಗೆ ನುಗ್ಗಿ, ಮನೆ, ಬೆಳೆಗಳಿಗೆ ಹಾನಿ ಉಂಟು ಮಾಡುತ್ತಿದೆ. ಕಾಲುವೆ ಒತ್ತುವರಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
    ಹೊಂಬಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಕುಂಟನಹೊಸಳ್ಳಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತಾಲೂಕಿನಲ್ಲಿ ಕಳೆದ 3 ದಿನಗಳಲ್ಲಿ 23 ಮನೆಗಳು ಭಾಗಶಃ, 2 ಮನೆಗಳು ಸಂಪೂರ್ಣವಾಗಿ ಬಿದ್ದಿವೆ ಎಂದು ತಹಸೀಲ್ದಾರ್ ಶಶಿಧರ ಮಾಡ್ಯಾಳ ಶಾಸಕ ಮಾನೆ ಅವರ ಗಮನಕ್ಕೆ ತಂದರು.
    ತಾಪಂ ಇಒ ಕೆ.ಎಂ. ಮಲ್ಲಿಕಾರ್ಜುನ, ತಾಪಂ ಸಹಾಯಕ ನಿರ್ದೇಶಕ ಚನ್ನಬಸಪ್ಪ ಹಾವಣಗಿ, ಲೋಕೋಪಯೋಗಿ ಇಲಾಖೆ ಎಇಇ ನಾಗರಾಜ, ಸಿಡಿಪಿಒ ಸಿ.ರಂಗನಾಥ, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts