ಕೋಲಾರ: ಡೀಸೆಲ್, ಪೆಟ್ರೋಲ್, ಹಾಲಿನ ದರ ಏರಿಕೆ ಹಾಗೂ ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸದೆ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ನಗರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಟಮಕ ಬಡಾವಣೆಯಲ್ಲಿ ಜಮಾಯಿಸಿದ ಎರಡೂ ಪಕ್ಷಗಳ ಕಾರ್ಯಕರ್ತರು ಪ್ರತಿಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದವರೆಗೆ ಹಸುಗಳ ಸಮೇತ ಪ್ರತಿಭಟನಾ ಮೆರವಣಿಗೆ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಆರ್.ಅಶೋಕ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಾಗೇಂದ್ರ ಅವರ ಪಾಲು ಶೇ.20 ಮಾತ್ರ ಇದ್ದು, ಉಳಿದ ಶೇ.80 ಪಾಲು ಮುಖ್ಯಮಂತ್ರಿ ಸಿದ್ದರಾಮಯ್ಯನವರದು. ಹಣವನ್ನೆಲ್ಲ ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದಾರೆ. ಬಡವರ ದುಡ್ಡು ಲೂಟಿ ಮಾಡಿ ಜನರನ್ನು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರವು ಬಡವರಿಗೆ ಚೊಂಬು ಕೊಟ್ಟು ಬಿಂದಿಗೆ ಕೊಂಡೊಯ್ಯುತ್ತಿದೆ. ಗ್ಯಾರಂಟಿಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಹೆಚ್ಚುವರಿ ಹಾಲು ಕೊಡಿ ಅಂತ ಯಾರಾದರೂ ಕೇಳಿದ್ರಾ..? ರೈತರಿಂದ ಖರೀದಿ ಮಾಡಿರುವ ಹಾಲಿನ ದರ ಏಕೆ ಏರಿಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.
- 800 ಕೋಟಿ ಪ್ರೋತ್ಸಾಧನ ಬಾಕಿ
ರೈತರಿಗೆ ನೀಡಲಾಗುತ್ತಿರುವ ಹಾಲಿನ ಪ್ರೋತ್ಸಾಹಧನವನ್ನು 800 ಕೋಟಿ ರೂಪಾಯಿಯನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಹಾಲು ಉತ್ಪಾದನೆಗೆ ತಗಲುವ ವೆಚ್ಚ ಹಾಗೂ ಶ್ರಮದ ಬಗ್ಗೆ ಸಿದ್ದರಾಮಯ್ಯ, ಶಿವಕುಮಾರ್ ಅವರಿಗೆ ಅರಿವಿದ್ದರೆ ಬಿಡುಗಡೆ ಮಾಡುತ್ತಿದ್ದರು. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡಲು ಕೂಡ ಯೋಗ್ಯತೆ ಇಲ್ಲದೆ ಕಲುಷಿತ ನೀರು ಕುಡಿದು ಜನರು ಸತ್ತಿದ್ದಾರೆ. ಡೆಂಘೆ, ಮಲೇರಿಯಾ ಹರಡುತ್ತಿದ್ದು, ಅದಕ್ಕೆ ಚಿಕಿತ್ಸೆ ನೀಡಲೂ ಸರ್ಕಾರದ ಬಳಿ ಹಣವಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ಕಾಂಗ್ರೆಸ್ ಸರ್ಕಾರ ದರ ಏರಿಕೆ ಮಾಡಿದೆ. ಆದರೆ ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಬದಲಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಆರ್.ಅಶೋಕ್, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. - ಜನರ ರಕ್ತ ಹೀರುತ್ತಿರುವ ಸರ್ಕಾರ
ತೈಲ ದರ ಏರಿಕೆಯಾಗಿ ಎಲ್ಲ ದರಗಳು ದುಪ್ಪಟ್ಟಾಗಿವೆ. ಹಾಲು ಉತ್ಪಾದನೆ ಹೆಚ್ಚಳವಾದರೆ ಅದನ್ನು ಬೇರೆ ರೀತಿ ಬಳಸಿಕೊಳ್ಳಬಹುದು. ಅದನ್ನು ಬಿಟ್ಟು ಹಾಲಿನ ದರ ಏರಿಸಿದ್ದಾರೆ. ಇನ್ನು ಲಿಕ್ಕರ್ ದರ ಕೂಡ ಏರಿಸುತ್ತಾರೆ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಜಾರಿ ಮಾಡಿ, ಅದಕ್ಕೆ ಹಣ ಹೊಂದಿಸಲು ಸಾಧ್ಯವಾಗದೆ ತೆರಿಗೆ ವಿಽಸಿ ಜನರ ರಕ್ತ ಹೀರುತ್ತಿದ್ದಾರೆ ಎಂದು ಅಶೋಕ್ ದೂರಿದರು. ಮುಂದಿನ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ತನಕ ಹೋರಾಟ ನಡೆಸಲು ಚಿಂತಿಸಲಾಗಿದೆ. ಇದಕ್ಕೆ ಜನತೆಯು ಸಹಕಾರ ಕೊಟ್ಟು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಹೋರಾಟ ನಡೆಸಬೇಕು ಎಂದು ಆರ್.ಅಶೋಕ್ ಹೇಳಿದರು.
- ಇಲಾಖೆಗಳಲ್ಲಿನ ಉಳಿಕೆ ಹಣ ಲೂಟಿ
ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ದಿವಾಳಿಯತ್ತ ಮುಖ ಮಾಡಿದ್ದು, ಜನರ ಮೇಲೆ ಆರ್ಥಿಕ ಹೊರೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ, ಪೆಟ್ರೋಲ್-ಡೀಸೆಲ್, ಹಾಲಿನ ದರ ಏರಿಕೆ ಮಾಡಿದ್ದಾರೆ. ದಲಿತ, ಕಾರ್ಮಿಕರ, ರೈತರ, ಯುವಕರ ಪರ ಸರ್ಕಾರ ಎಂದು ಹೇಳಿಕೊಂಡು ಬಂದಿರುವ ಸಿದ್ದರಾಮಯ್ಯ ಅವರು, ಕಮಿಷನ್ ಇಲ್ಲದೆ ಕೆಲಸ ಮಾಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರೇ ಬಹಿರಂಗ ಪಡಿಸಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ರೈತರಿಗೆ ಹಾಲಿಗೆ ಪ್ರೋತ್ಸಾಹಧನ ನೀಡಲಿಲ್ಲ. ಇಲಾಖೆಗಳಲ್ಲಿನ ಉಳಿಕೆ ಹಣ ಲೂಟಿ ಮಾಡಿ ಗ್ಯಾರಂಟಿಗಳಿಗೆ ನೀಡಿದ್ದಾರೆ. ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರೇ ಇರುವುದರಿಂದ ಜನರಿಗೆ ಮೋಸ ಮಾಡಿ ಸರ್ಕಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ವರ್ತೂರು ಆರ್.ಪ್ರಕಾಶ್, ರಾಜಣ್ಣ, ವೈ.ಸಂಪಂಗಿ, ಬಿ.ಪಿ.ವೆಂಕಟಮುನಿಯಪ್ಪ, ಎಂ.ನಾರಾಯಣಸ್ವಾಮಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅರುಣ, ಮುಖಂಡಾದ ಸಿಎಂಆರ್ ಶ್ರೀನಾಥ್, ಸೀಕಲ್ ರಾಮಚಂದ್ರೇಗೌಡ, ನಟರಾಜ್, ಮಮತಾ, ರಾಮಚಂದ್ರ, ಎಂ.ಪಿ.ನಾರಾಯಣಸ್ವಾಮಿ, ಹನುಮತಪ್ಪ ಮುಂತಾದವರು ಪಾಲ್ಗೊಂಡಿದ್ದರು.