ಹೆಚ್ಚುತ್ತಿರುವ ತಾಪಮಾನ, ಸರ್ಕಾರಿ ಕಚೇರಿಗಳ ವೇಳಾ ಪಟ್ಟಿ ಬದಲು, ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

vidhanasoudha
Published on

ವಿಜಯಪುರ: ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆ ಸರ್ಕಾರಿ ಕಚೇರಿಗಳ ವೇಳಾ ಪಟ್ಟಿ ಬದಲಿಸುವಂತೆ ಒತ್ತಾಯಿಸಿದ ಸರ್ಕಾರಿ ನೌಕರರ ಸಂಘದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ವೇಳಾ ಪಟ್ಟಿ ಬದಲಿಸಿ ಬುಧವಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಬಿಸಿಲಿನ ತಾಪದಿಂದಾಗಿ ನೌಕರರು ಅನುಭವಿಸುತ್ತಿರುವ ತೊಂದರೆಗಳ ಕುರಿತು ವಿವರಿಸಿ ಕಚೇರಿಗಳ ವೇಳಾ ಪಟ್ಟಿ ಬದಲಿಸುವಂತೆ ಫೆ.21ರಂದು ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ನೌಕರರ ಬೇಡಿಕೆಗೆ ಸ್ಪಂದಿಸಿ ವೇಳಾ ಪಟ್ಟಿ ಬದಲಿಸಿದೆ.

2025 ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 1.30 ರವರೆಗೆ ಕಚೇರಿ ವೇಳೆ ಬದಲಾಯಿಸಿ ಆದೇಶಿಸಿದೆ.

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ, ಅಡೆತಡೆಯಿಲ್ಲದೆ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನೌಕರರ ಸಂಘದಿಂದ ಸ್ವಾಗತ

ಬಿಸಿಲಿನ ತಾಪಮಾನ ಹೆಚ್ಚಾಗಿದ್ದು ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಹೀಗಾಗಿ ನೌಕರರು ಮಾತ್ರವಲ್ಲದೇ ಸಾರ್ವಜನಿಕರು ಸಹ ಸಮಸ್ಯೆ ಅನುಭವಿಸುವಂತಾಗಿದೆ. ಮಾನವೀಯತೆಯ ದೃಷ್ಠಿಯಿಂದ ಸರ್ಕಾರಿ ಕಚೇರಿಗಳ ವೇಳಾ ಪಟ್ಟಿ ಬದಲಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಇದರಿಂದ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೂ ಅನುಕೂಲವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net