

Patna: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ (Bihar Election) ಮುಸ್ಲಿಮರಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ವಿಫಲವಾಗಿದೆ ಎಂದು ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಆರೋಪಿಸಿದ್ದಾರೆ.
ಮಹಾಘಟಬಂಧನ್ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಮತ್ತು ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿಐಪಿ ಮುಖ್ಯಸ್ಥ ಮುಖೇಶ್ ಸಹಾನಿ ಅವರನ್ನು ಘೋಷಿಸಿದ ಬಳಿಕ ಚಿರಾಗ್ರಿಂದ ಈ ಹೇಳಿಕೆ ಹೊರ ಬಿದ್ದಿದೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಕೇಂದ್ರ ಸಚಿವ ಪಾಸ್ವಾನ್, 2005 ರಲ್ಲಿ ನನ್ನ ತಂದೆ, ದಿವಂಗತ ರಾಮ್ ವಿಲಾಸ್ ಪಾಸ್ವಾನ್, ಮುಸ್ಲಿಂ ಸಮುದಾಯದವರು ಮುಖ್ಯಮಂತ್ರಿಯಾಗಲು ತಮ್ಮದೇ ಪಕ್ಷವನ್ನು ತ್ಯಾಗ ಮಾಡಿದರು. ಆದರೆ, ಆರ್‌ಜೆಡಿ ಅವರನ್ನು ಬೆಂಬಲಿಸಲಿಲ್ಲ. ಈ ಘಟನೆ ನಡೆದು ಇಪ್ಪತ್ತು ವರ್ಷಗಳು ಕಳೆದರೂ, ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿಯನ್ನಾಗಲಿ ಮಾಡಲು ಸಿದ್ಧರಿಲ್ಲ ಎಂದಿದ್ದಾರೆ.
ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಮಹಾಘಟಬಂಧನ್ ನಾಯಕರುಗಳು ಮುಸ್ಲಿಮರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದ್ದು, ಸಮುದಾಯದ ಜನರು ಈ ತಂತ್ರವನ್ನು ಅರ್ಥಮಾಡಿಕೊಳ್ಳಬೇಕು, ಕೇಂದ್ರ ಸರ್ಕಾರದ ಯೋಜನೆಗಳು ಎಲ್ಲ ವರ್ಗದ ಜನರಿಗೂ ಪ್ರಯೋಜನ ನೀಡುವ ಗುರಿಯನ್ನು ಹೊಂದಿವೆ ಎಂದು ಹೇಳಿದರು. ಗುರುವಾರ ಮಹಾಘಟಬಂಧನ್ ತನ್ನ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಬಿಹಾರ ವಿಧಾನಸಭೆಯ ವಿಪಕ್ಷದ ನಾಯಕ ತೇಜಸ್ವಿ ಯಾದವ್ ಹೆಸರನ್ನು ಘೋಷಿಸುವುದರೊಂದಿಗೆ ಮೈತ್ರಿಕೂಟದ ಅಸ್ತಿತ್ವದ ಕುರಿತಾಗಿ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯಲಾಯಿತು.
ಬಿಹಾರ ವಿಧಾನಸಭಾ ಚುನಾವಣೆಗಳು ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ಫಲಿತಾಂಶ ಹೊರಬೀಳಲಿದೆ. ಮಹಾಘಟಬಂದನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿಪಕ್ಷ ನಾಯಕ ತೇಜಸ್ವಿ ಯಾದವ್ ಹೆಸರನ್ನು ಘೋಷಿಸಲಾಗಿದ್ದು, ಇತ್ತ ಎನ್ಡಿಎ ಮೈತ್ರಿಕೂಟ ಯಾರನ್ನು ತನ್ನ ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡಿಲ್ಲ, ಆದರೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಅನೇಕ ನಾಯಕರು, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಚುನಾವಣೆ ಎದುರಿಸುವುದಾಗಿ ತಿಳಿಸಿದ್ದಾರೆ.(ಏಜೆನ್ಸೀಸ್)