ಕಡೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಪಟ್ಟಣದಲ್ಲಿ ಕಡೂರು-ಬೀರೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ-ಜೆಡಿಎಸ್, ರಾಜ್ಯಾಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಗರ್ವನರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಗಣಪತಿ ಆಂಜನೇಯ ವೃತ್ತದ ಸಮೀಪ ಸಾಂಕೇತಿಕವಾಗಿ ರಸ್ತೆ ತಡೆ ನಿರ್ಮಿಸಿ ಪ್ರತಿಭಟಿಸಿದರು.
ಜಿಪಂ ಮಾಜಿ ಸದಸ್ಯ ಶರತ್‌ಕೃಷ್ಣಮೂರ್ತಿ ಮಾತನಾಡಿ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಕೆಡವಲು ಷಡ್ಯಂತ್ರ ರೂಪಿಸಿದ್ದಾರೆ. ಅಲ್ಲದೆ ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಸಹಿಸದ ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯಪಾಲರ ಹುದ್ದೆ ದುರ್ಬಳಕೆ ಮಾಡಿಕೊಂಡು ಬಡವರು,ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರನ್ನು ಹತ್ತಿಕ್ಕಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.
ಕುರುಬ ಸಮಾಜದ ತಾಲೂಕು ಅಧ್ಯಕ್ಷ ಹೋಚಿಹಳ್ಳಿ ಭೋಗಪ್ಪ , ಕಂಸಾಗರ ಗೇಟ್ ಸಮೀಪ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಿರ್ಮಿಸಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕಡೂರು-ಬೀರೂರು ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ಬಾಸೂರು ಚಂದ್ರಮೌಳಿ, ಆಸಂದಿ ಕಲ್ಲೇಶ್, ಪುರಸಭೆ ಸದಸ್ಯರಾದ ತೋಟದಮನೆ ಮೋಹನ್‌ಕುಮಾರ್, ಶ್ರೀಕಾಂತ್, ಈರಳ್ಳಿ ರಮೇಶ್, ಮುಖಂಡರಾದ ಅಬಿದ್ ಪಾಷಾ, ಜೋಡಿ ತಿಮ್ಮಾಪುರ ಕೆ.ಟಿ.ನರಸಿಂಹಪ್ಪ, ಯಗಟಿ ಗೋವಿಂದಪ್ಪ, ಕಡೂರು ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ರೇವತಿ ನಾಗರಾಜ್, ಕಂಸಾಗರ ರೇವಣ್ಣ, ಸೋಮಶೇಖರ್, ಡಿ.ಉಮೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
