ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬೆಳೆಸಿದ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗ ಶಾಸಕರು ಯಾರಿದ್ದರೇನು? ಅಲ್ಲಿನ ಜನರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಹೀಗಾಗಿ ಆ ಕ್ಷೇತ್ರದಲ್ಲಿ ಗೆಲ್ಲಬೇಕು ಎಂಬ ಗುರಿಯೊಂದಿಗೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಯಾರ ಒಪ್ಪಿಗೆಯೂ ನಮಗೆ ಬೇಕಾಗಿಲ್ಲ ಎಂದರು.
ಗೆಲುವೇ ಗುರಿ: ಗ್ರಾಮೀಣ ವಿಧಾನಸಭಾ ಕ್ಷೇತ್ರ ಗೆಲ್ಲುವುದೇ ನನ್ನ ಗುರಿ. ಇದು ಷಡ್ಯಂತ್ರ ಅಲ್ಲ. ಈ ಹಿಂದಿನ ಚುನಾವಣೆಯಲ್ಲಿನ ಮುಖಗಳು ಬೇರೆ, ಈಗಿರುವ ಮುಖವೇ ಬೇರೆ. ಅರಬಾವಿ ವಿಧಾನಸಭಾ ಕ್ಷೇತ್ರದ ಮಾದರಿಯಲ್ಲಿಯೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೂ ನಮ್ಮ ಹಿಡಿತ ಇಟ್ಟುಕೊಳ್ಳಲಾಗುವುದು. ಅದಕ್ಕಾಗಿ ತಳಮಟ್ಟದಿಂದ ನಮ್ಮ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಅದು ದೊಡ್ಡ ಮಟ್ಟಕ್ಕೆ ಬೆಳೆಯಲಿದೆ ಎಂದು ತಿಳಿಸಿದರು.
ವಾರದಲ್ಲೇ ಬೆಳಗಾವಿ ನಗರದಲ್ಲಿ ಸಭೆ
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕ ಪ್ರಮಾಣದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ಗ್ರಾಪಂ ಚುನಾವಣೆಯ ಅಭ್ಯರ್ಥಿಗಳ ಗೆಲುವಿನ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಏನೇನೋ ಊಹಾಪೋಹ ಹರಿದಾಡುತ್ತಿದೆ. ಆದರೆ, ವಾಸ್ತವ ಸ್ಥಿತಿ ಬೇರೆಯೇ ಇರುತ್ತದೆ. ಈ ವಾರ ಬೆಳಗಾವಿ ನಗರದಲ್ಲಿ ಸಮಾರಂಭ ನಡೆಸಿ, ಗ್ರಾಮೀಣ ಕ್ಷೇತ್ರದಲ್ಲಿ ವಿಜಯ ಸಾಧಿಸಿದ ಬಿಜೆಪಿ ಬೆಂಬಲಿತ ಸದಸ್ಯರನ್ನು ಹಾಜರುಪಡಿಸುತ್ತೇನೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಮಹಾನಗರ ಪಾಲಿಕೆ ಮುಂಭಾಗದಲ್ಲಿ ಕನ್ನಡ ಧ್ವಜ ಹಾರಿಸುವ ಕುರಿತು ಕಾನೂನು ಚೌಕಟ್ಟಿನಲ್ಲಿ ಕ್ರಮ ವಹಿಸಲಾಗುವುದು. ಈ ವಿಷಯವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸುತ್ತೇನೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿ ಸದಸ್ಯರೇ ಗೆಲ್ಲಲು ಎಲ್ಲ ರೀತಿಯ ತಯಾರಿ ಆರಂಭಿಸಿದ್ದೇವೆ.
| ರಮೇಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ