More

    ರಾಯಣ್ಣ ಪ್ರತಿಮೆ ಸ್ಥಾಪನೆಗೆ ಅವಕಾಶ ನೀಡಿ

    ಗೋಕಾಕ: ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಲು ಅನುವು ಮಾಡಿಕೊಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಹಾಲುಮತ ಮಹಾಸಭಾ ಸಂಘಗಳ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾನುವಾರ ನಗರದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

    ಪೀರನವಾಡಿ ಗ್ರಾಮದಲ್ಲಿ ನಾಡಿನ ಸ್ವಾತಂತ್ರೃಕ್ಕಾಗಿ ತನ್ನ ಪ್ರಾಣವನ್ನೇ ಬಲಿಕೊಟ್ಟು ಹೋರಾಟ ನಡೆಸಿದ ಶೂರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಅನಾವರಣ ಮಾಡುವ ಸಂದರ್ಭದಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿ ಅವಕಾಶ ಕಲ್ಪಿಸದೇ ಪ್ರತಿಮೆಯನ್ನು ಬೆಳಗಾವಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಇಟ್ಟಿರುವುದು ಖೇದಕರ ಸಂಗತಿಯಾಗಿದೆ. ಸಚಿವರು ಸೌಹಾರ್ದಯುತವಾಗಿ ಈ ಸಮಸ್ಯೆ ಬಗೆಹರಿಸಿ ಪ್ರತಿಮೆ ಪ್ರತಿಷ್ಠಾಪಿಸಲು ಅನುಕೂಲ ಮಾಡಿಕೊಡುವಂತೆ ವಿನಂತಿಸಿದರು.

    ಮನವಿ ಸ್ವಿಕರಿಸಿ ಮಾತನಾಡಿದ ಸಚಿವರು, ಮೂರ್ತಿ ಪ್ರತಿಷ್ಠಾಪನೆಯ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಅದರ ಬಗ್ಗೆ ನನಗೂ ಸಹಿತ ಆಸಕ್ತಿ ಇದೆ. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ನಾನು ಸೌಹಾರ್ದಯುತವಾಗಿ ಮೂರ್ತಿ ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

    ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ, ಅಪೇಕ್ಸ್ ಬ್ಯಾಂಕ್ ನಿರ್ದೇಶಕ ಲಕ್ಷ್ಮಣರಾವ್ ಚಿಂಗಳೆ, ಕುರುಬರ ಸಂಘದ ಮಾಜಿ ರಾಜಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ, ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ, ತಾಲೂಕಾಧ್ಯಕ್ಷ ಸಿದ್ಧಲಿಂಗಪ್ಪ ದಳವಾಯಿ, ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ವಿನಾಯಕ ಕಟ್ಟಿಕಾರ, ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ಮಾರುತಿ ಮರಡಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts