ಪುಸ್ತಕ ಪ್ರಿಯರಿಗೆ ಬಂಪರ್‌: ಶೇ.50ರ ರಿಯಾಯಿತಿ ನೀಡ್ತಿದೆ ಪುಸ್ತಕ ಪ್ರಾಧಿಕಾರ

book1
Published on

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರತಿಬಾರಿಯಂತೆ ಈ ಸಲವೂ ಕನ್ನಡ ಪುಸ್ತಕ ಪ್ರಾಧಿಕಾರ  ಅನೇಕ ಪುಸ್ತಕಗಳ ಮೇಲೆ ರಿಯಾಯಿತಿ ಘೋಷಿಸಿದೆ.

ನವೆಂಬರ್‌ ತಿಂಗಳು ಪೂರ್ತಿಯಾಗಿ ಈ ರಿಯಾಯಿತಿ ಇರಲಿದೆ. ಶೇ. 50ರಷ್ಟು ರಿಯಾಯಿತಿ ಪ್ರತಿ ಪುಸ್ತಕದ ಮೇಲೆ ಸಿಗಲಿದೆ. ಈ ಕುರಿತು ಕನ್ನಡ ಪುಸ್ತಕ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ 2020ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಅದು ಹೇಳಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಇದರ ಜತೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಇಂಟರ್‌ನೆಟ್‌ನಲ್ಲಿಯೂ ಶೇ.50ರ ರಿಯಾಯಿತಿಯಲ್ಲಿ ಪಡೆಯಬಹುದು.

http://www.kannadapustakapradhikara.com/  ಮೇಲೆ ಕ್ಲಿಕ್‌ ಮಾಡಿ ನಿಮ್ಮ ಪುಸ್ತಕಗಳನ್ನು ಆಯ್ಕೆ ಮಾಡಿ, ಆನ್‌ಲೈನ್‌ ಮೂಲಕವೇ ಹಣ ಪಾವತಿಸಿ ರಿಯಾಯಿತಿ ಪುಸ್ತಕ ಪಡೆಯಬಹುದು. ಅಂಚೆಯ ಮೂಲಕ ಕೂಡ ಪುಸ್ತಕ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು ಎಂದು ಪ್ರಾಧಿಕಾರ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net