

ಬೆಂಗಳೂರು: ಯಾವುದೇ ಕಾರಣಕ್ಕೂ ಕಾಲೇಜುಗಳನ್ನು ಸ್ಥಗಿತ ಮಾಡುವುದಿಲ್ಲ. ಈಗಾಗಲೇ ಒಂದು ವರ್ಷ ವ್ಯರ್ಥವಾಗಿರುವುದು ಸಾಕು, ಮುಂಜಾಗ್ರತಾ ಕ್ರಮಕೈಗೊಂಡು ತರಗತಿ ನಡೆಸಲಾಗುತ್ತದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಹೇಳಿದರು.
ಬಿಎಂಎಸ್ ಕಾಲೇಜ್ ಸೇರಿ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಬಂದಿದೆ ಎಂದು ಸುದ್ದಿಗಾರರು ಕೇಳಿದೆ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ: ವಿದ್ಯಾರ್ಥಿಗಳಿಗೆ ಆಫ್‌ಲೈನ್ ಕ್ಲಾಸ್ ಕಡ್ಡಾಯವಲ್ಲ, ಆಫ್‌ಲೈನ್ ಅಥವಾ ಆನ್‌ಲೈನ್‌ನಲ್ಲೂ ಹಾಜರಾಗಬಹುದು. ಆದರೆ, ಹಾಜರಾತಿ ಕಡ್ಡಾಯ. ಆಯಾ ಶಿಕ್ಷಣ ಸಂಸ್ಥೆಗಳು ಇನ್ನೂ ಉತ್ತಮವಾಗಿ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಬೇಕು. ಪರಿಣಾಮಕಾರಿಯಾಗಿ ಪರೀಕ್ಷೆ ಮಾಡಬೇಕು. ಸ್ಯಾನಿಟೈಸೇಷನ್, ಮಾಸ್ಕ್, ದೈಹಿಕ ಅಂತರ ಕಾಪಾಡಿಕೊಳ್ಳುವತ್ತ ಹೆಚ್ಚು ನಿಗಾ ಇಡಬೇಕು ಎಂದು ಸಲಹೆ ಮಾಡಿದರು.
ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ವ್ಯತ್ಯಯ ಆಗಬಾರದು. ಪರಿಸ್ಥಿತಿಯನ್ನು ಎದುರಿಸಲು ಎಲ್ಲ ತಯಾರಿಯನ್ನು ಎಲ್ಲ ಶಿಕ್ಷಣ ಸಂಸ್ಥೆಗಳು ಮಾಡಿಕೊಳ್ಳಬೇಕು. ಈಗಾಗಲೇ ವ್ಯಾಕ್ಸಿನ್ ಬಂದಿದೆ. ಎರಡನೇ ಅಲೆ ಎದ್ದಿದೆ ಎನ್ನುವ ಕಾರಣಕ್ಕೆ ಆಫ್‌ಲೈನ್ ತರಗತಿಗಳನ್ನು ಸ್ಥಗಿತ ಮಾಡುವುದು ಸರಿಯಲ್ಲ ಎಂದು ಹೇಳಿದರು.