

ಬೆಂಗಳೂರು: ಮಾಜಿ ಸಚಿವ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಪ್ರೊ. ಮುಮ್ತಾಜ್ ಅಲಿ ಖಾನ್ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಇವರು ಬಳಲುತ್ತಿದ್ದರು ಎನ್ನಲಾಗಿದೆ.
ಇವರು ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತಗೊಂಡಿದ್ದರು. 2013ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದರು.
2008ರಲ್ಲಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಅವರು ಬಳಿಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಪಕ್ಷದಿಂದ ಅನ್ಯಾಯವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ನಂತರ ಕಾಂಗ್ರೆಸ್ ಸೇರಿದ್ದರೂ 2015ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಅಸಮಾಧಾನ ಹೊರಹಾಕಿ, ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡುತ್ತಿಲ್ಲ ಎಂದು ಹೇಳಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು.
ಮುಮ್ತಾಜ್ ಅಲಿಖಾನ್ ಅವರು, ಎಂ.ಎ, ಬಿ. ಎಲ್. ಪಿ. ಹೆಚ್.ಡಿ. ಪದವಿ ಪಡೆದಿದ್ದರು. ಇವರಿಗೆ ಸಾಹಿತ್ಯ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ 2012ರಲ್ಲಿ ದಸರಾ ಪ್ರಶಸ್ತಿ, 2002ರಲ್ಲಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಪ್ರಶಸ್ತಿ, ಶ್ರೀ ಜಿ. ನಾರಾಯಣ ಕುಮಾರ್ ಸಂಸ್ಥೆಯಿಂದ ಸಮಾಜ ಸೇವೆಗಾಗಿ 1993ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳು ಸಿಕ್ಕಿವೆ.