

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿರುವ ಚಂದ್ರು ಅವರು, ರಾಜೀನಾಮೆಗೆ ಸ್ಪಷ್ಟ ಕಾರಣವನ್ನು ನೀಡಲಿಲ್ಲ.
'ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಗೊಂಡೆ. ಪಕ್ಷಕ್ಕೆ ಸೇರಿದಂದಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ತೃಪ್ತಿ ಇದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದು, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ' ಎಂದು ಪತ್ರದಲ್ಲಿ ಬರೆದಿದ್ದಾರೆ.
ಇಂದಿನವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿದ ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಮನದಾಳದ ಕೃತಜ್ಞತೆಗಳು ಎಂದು ರಾಜೀನಾಮೆ ಪತ್ರದಲ್ಲಿ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಚಂದ್ರು ಅವರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದರು ಎನ್ನಲಾಗುತ್ತಿದೆ.