ಶಿವಮೊಗ್ಗದಲ್ಲಿ ಭೀಕರ ದುರಂತಕ್ಕೆ ಎಂಟು ಬಲಿ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ

Blast
Published on

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್​ನಲ್ಲಿ ನಿನ್ನೆ ರಾತ್ರಿ 10.20ರ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಭವಿಸಿರುವ ಸ್ಫೋಟಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಘಟನೆಯಲ್ಲಿ ಬಿಹಾರ ಮೂಲದ 8 ಕಾರ್ವಿುಕರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಹೇಳಿದ್ದಾರೆ.

ಈ ಮಧ್ಯೆ, ಐದು ಮೃತದೇಹಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಇಬ್ಬರ ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಐವರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿದ್ದು, ಉಳಿದವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಕೇಂದ್ರ ಕಲ್ಲಿದ್ದಲು ಸಚಿವ ಪಹ್ಲಾದ್‌ ಜೋಶಿ ಕೂಡ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net