More

    ಶಿವಮೊಗ್ಗ ಕ್ರಷರ್‌ ದುರಂತ: ಸಂತ್ರಸ್ತರ ಕುಟುಂಬಗಳಿಗೆ ಸಕಲ ನೆರವು- ಪ್ರಧಾನಿ ಮೋದಿ

    ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್​ನಲ್ಲಿ ನಿನ್ನೆ ರಾತ್ರಿ 10.20ರ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಭವಿಸಿರುವ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಟ್ವೀಟ್‌ ಮಾಡಿರುವ ಅವರು, ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಶೀಘ್ರವೇ ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ ಎಂದು ತಿಳಿಸಿದ್ದಾರೆ.

    ಈ ನಡುವೆ, ಸ್ಫೋಟ ಸ್ಥಳಕ್ಕೆ ಬೆಂಗಳೂರು ಮತ್ತು ಮಂಗಳೂರಿನಿಂದ ಬಾಂಬ್‌ ನಿಷ್ಕ್ರಿಯ ದಳ (ಬಿಡಿಡಿಎಸ್‌) ಆಗಮಿಸುತ್ತಿದ್ದು, ಇದರ ಆಗಮನದ ನಂತರವೇ ತನಿಖೆ ನಡೆಸಲಾಗುವುದು. ಪರಿಶೀಲನೆ ಬಳಿಕ, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಮೆಡಿಕಲ್ ಟೀಂ ಶೋಧ ಕಾರ್ಯ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

    ಸದ್ಯ ಘಟನಾ ಸ್ಥಳಕ್ಕೆ ಯಾರೂ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಸುತ್ತಲೂ ಪೊಲೀಸ್‌ ಸರ್ಪಗಾವಲು ಹಾಕಲಾಗಿದೆ. ಯಾರನ್ನೂ ಒಳಗೆ ಬಿಡುತ್ತಿಲ್ಲ.

    ಭಾರಿ ಪ್ರಮಾಣದ ಸ್ಫೋಟಕ ತಂದಿರುವ ಹಿನ್ನೆಲೆಯಲ್ಲಿ, ಅವೆಲ್ಲವು ರಾತ್ರಿಯೇ ಸ್ಫೋಟಗೊಂಡಿರಬಹುದು. ಒಂದು ವೇಳೆ ಕೆಲವು ಸ್ಫೋಟಕಗಳು ಸಜೀವ ಸ್ಥಿತಿಯಲ್ಲಿದ್ದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಮುಂದಿನ ಕಾರ್ಯಾಚರಣೆ ನಡೆಯಲಿದೆ.

    ಈ ನಡುವೆ ಅನೇಕ ಮುಖಂಡರು ಈ ಘಟನೆಯ ಕುರಿತಂತೆ ಟ್ವೀಟ್‌ ಮಾಡುತ್ತಿದ್ದಾರೆ. ಘಟನೆಯ ಬಗ್ಗೆ ನೋವು ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಜಗದೀಶ್‌ ಶೆಟ್ಟರ್‌, ಲಕ್ಷ್ಮಿ ಹೆಬ್ಬಾಳ್ಕರ್‌ ಮುಂತಾದವರು ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

    ಶಿವಮೊಗ್ಗದಲ್ಲಿ ಭೀಕರ ದುರಂತಕ್ಕೆ ಎಂಟು ಬಲಿ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ

    ಶಿವಮೊಗ್ಗದಲ್ಲಿ ಭೀಕರ ದುರಂತಕ್ಕೆ ಎಂಟು ಬಲಿ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts