

ನವದೆಹಲಿ: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಕುರಿತು ದೆಹಲಿಯ ಗಂಗಾರಾಮ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇವರು ಗುರುವಾರ (ಜುಲೈ 30) ಆಸ್ಪತ್ರೆಗೆ ದಾಖಲಾಗಿದ್ದರು. ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಡಿಸ್ಚಾರ್ಜ್ ಆಗಿದ್ದಾರೆ ಎಂದು ಡಾ.ಡಿ.ಎಸ್.ರಾಣಾ ಹೇಳಿದ್ದಾರೆ.
ಕರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಎದುರಾಗಿರುವ ರಾಜಕೀಯ ಪರಿಸ್ಥಿತಿ ಕುರಿತಂತೆ ರಾಜ್ಯಸಭಾ ಸದಸ್ಯರೊಂದಿಗೆ ಕಳೆದ ಗುರುವಾರ ಇವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದರು. ಇದಾದ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲುಮಾಡಲಾಗಿತ್ತು.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸೋನಿಯಾ ಗಾಂಧಿ ಪಕ್ಷದ ರಾಜ್ಯ ಸಭಾ ಸಂಸದರೊಂದಿಗೆ ನಡೆಯಲಿರುವ ವರ್ಚೂವಲ್ ಮೀಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.
73 ವರ್ಷದ ಸೋನಿಯಾ ಗಾಂಧಿ ಅವರಿಗೆ ಫೆಬ್ರವರಿ ತಿಂಗಳಿನಲ್ಲಿಯೂ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಆಗ ಸಹ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಂಡನೆಯಾಗಿದ್ದ ಕೇಂದ್ರ ಬಜೆಟ್ ಸಂದರ್ಭದಲ್ಲಿ ಇವರು ಗೈರಾಗಿದ್ದರು.
ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ದರು. 2017ರ ಫೆಬ್ರವರಿಯಲ್ಲಿ ಕಲುಷಿತ ಆಹಾರ ಸೇವನೆ ಮತ್ತು 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.