More

    ಮಹಿಳೆಯರಿಗೆ ಸಾವಿತ್ರಿಬಾಯಿ ಫುಲೆ ಸ್ಫೂರ್ತಿ

    ಎನ್.ಆರ್.ಪುರ: ಸಾವಿತ್ರಿಬಾಯಿ ಫುಲೆ ಮಾಡಿದ ಮಹಿಳಾ ಸಮಾನತೆ ಆಂದೋಲನದಿಂದ ದೇಶಾದ್ಯಂತ ಮಹಿಳೆಯರು ಶಿಕ್ಷಣ ಪಡೆಯಲು ಸ್ಫ್ಪೂರ್ತಿಯಾಯಿತು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

    ಬಿ.ಎಚ್.ಕೈಮರದಲ್ಲಿ ತಾಲೂಕು ಕಸಾಪ ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ವಿಚಾರ ಮಂಥನ ಹಾಗೂ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಸಾವಿತ್ರಿಬಾಯಿ ಫುಲೆ ಹೋರಾಟ ಮಾಡಿ ಶಿಕ್ಷಣ ಪಡೆದು ಪ್ರಥಮ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಮಹಿಳೆಯರಿಗೆ ಶಿಕ್ಷಣ ಪಡೆಯಲು ಸ್ಫೂರ್ತಿ ನೀಡಿದರು ಎಂದರು.
    ಇಂದಿನ ಯುವ ಜನರು ಉತ್ತಮ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಸಂಸ್ಕಾರ ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳು ವಿದೇಶದಲ್ಲಿದ್ದು ತಂದೆ, ತಾಯಿಯನ್ನು ವೃದ್ಧಾಶ್ರಮಕ್ಕೆ ಕಳುಹಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
    ತರೀಕೆರೆ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಿಸಲು ನಿವೇಶನ ಮಂಜೂರಾಗಿದೆ. ಎನ್.ಆರ್.ಪುರದಲ್ಲೂ ಕನ್ನಡ ಭವನಕ್ಕೆ ನಿವೇಶನ ಮಂಜೂರು ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
    ಪೂರ್ಣೇಶ್ ಮಾತನಾಡಿ, ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕ ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಪ್ರತಿ ನಿತ್ಯ ದಿನ ಪತ್ರಿಕೆ ಓದಬೇಕು ಎಂದರು.
    ಬಸ್ತಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ಎಂ.ವಿ.ಶಾರದಾಂಬಾ ಅವರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
    ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಾ ನಂಜುಂಡಸ್ವಾಮಿ, ಬಿ.ಎಚ್.ಕೈಮರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಮೊಹಮ್ಮದ್ ರಹಮತ್ ಉಲ್ಲಾ, ಜುಬೇದಾ, ಶ್ಯಾಮಲಾ ಸತೀಶ್, ಜಯಮ್ಮ, ಭಾನುಮತಿ, ವಸಂತಿ, ಆಲಂದೂರು ನಂದಿನಿ, ಶಶಿಕಲಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts