

ಮಂಗಳೂರು: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣದಿಂದ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಪುರಭವನದಲ್ಲಿ ಗುರುವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಹೊಂದಬೇಕಾದರೆ ಬಾಲಕಾರ್ಮಿಕತೆಯ ವಿರುದ್ಧ ಶ್ರಮವಹಿಸಬೇಕು. ಬಾಲಕಾರ್ಮಿಕತೆಯನ್ನು ನಿರ್ಮೂಲನೆಗೊಳಿಸುವುದು ಕೇವಲ ಇಲಾಖೆಗಳಿಗೆ ಮಾತ್ರ ಜವಾಬ್ದಾರಿಯಲ್ಲ, ನಮ್ಮೆಲ್ಲರ ಹೊಣೆಯೂ ಆಗಿದೆ ಎಂದವರು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಕೀಲ ನಿಖೇಶ್ ಶೆಟ್ಟಿ ಮಾತನಾಡಿ, ಸಂವಿಧಾನದ ಪ್ರಕಾರ 6 ರಿಂದ 14 ವರ್ಷದೊಳಗಿನ ದುಡಿಯುವ ಮಕ್ಕಳ ರಕ್ಷಣೆ ಮಾಡಬೇಕು. ಬಡತನ ಬಾಲಕಾರ್ಮಿಕತೆಗೆ ಕಾರಣವಲ್ಲ. ಮಕ್ಕಳು ಹಣದಾಸೆಗೆ ಅಥವಾ ತಂದೆ ತಾಯಿಯ ಕೆಟ್ಟ ಹವ್ಯಾಸಗಳಿಗೆ ಶಾಲೆಗೆ ಹೋಗದೆ ದುಡಿಯಲು ಹೋಗುತ್ತಾರೆ. ಪ್ರತಿ ಮಕ್ಕಳಿಗೂ ಶಿಕ್ಷಣದ ಮಹತ್ವ ತಿಳಿಸಿ ಜಾಗೃತಿ ಮೂಡಿಸಿ ಅವರ ಉತ್ತಮ ಭವಿಷ್ಯ ರೂಪಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ಎಂ.ಎಸ್ ಮಹಾದೇವ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಹಿರಿಯ ಅಧಿಕಾರಿ ಡಾ.ಸುಮಂಗಳ ನಾಯಕ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ, ಪ್ರದೀಪ್ ಡಿಸೋಜ, ಪರಿಸರಾಧಿಕಾರಿ ಡಾ. ಲಕ್ಷ್ಮಿಕಾಂತ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಭರತ್, ಸಹಾಯಕ ಕಾರ್ಮಿಕ ಆಯುಕ್ತೆ ನಾಝಿಯಾ ಸುಲ್ತಾನ, ಸಹಾಯಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್, ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಹೆಚ್.ವಿ , ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಅಕ್ಷತಾ ಆದರ್ಶ್, ಪ್ರಜ್ಞ ಕೌನ್ಸಿಲಿಂಗ್ ಸೆಂಟರ್ ನಿರ್ದೇಶಕಿ ಹಿಲ್ಡಾ ರಾಯಪ್ಪನ್, ಪಡಿ ಸರ್ಕಾರೇತರ ಸಂಸ್ಥೆಯ ನಿರ್ದೇಶಕ ರೆನ್ನಿ ಡಿಸೋಜ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಮತ್ತಿತರರು ಉಪಸ್ಥಿತರಿದ್ದರು.