More

    ಸೇವಾ ಭದ್ರತೆ ಒದಗಿಸಲು ಆಗ್ರಹ: ಹೊಸಪೇಟೆಯಲ್ಲಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ

    ಹೊಸಪೇಟೆ: ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ನಗರದ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಶುಕ್ರವಾರ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗುರು ಬಸವರಾಜ್‌ಗೆ ಮನವಿ ಸಲ್ಲಿಸಿದರು.

    ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14800 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2003-04 ರಿಂದ ಅತಿ ಕಡಿಮೆ ಗೌರವಧನಕ್ಕೆ ದುಡಿಯುತ್ತಿದ್ದೇವೆ. ಸರ್ಕಾರ ಬೋಧಕರ ಕೊರತೆಗೆ ಅನುಗುಣವಾಗಿ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅತಿಥಿ ಉಪನ್ಯಾಸಕರ ಸೇವೆ ಪಡೆಯುತ್ತಲೇ ಬಂದಿದೆ. ಪರೀಕ್ಷೆ ಕಾರ್ಯ ಸೇರಿದಂತೆ ಕಾಲೇಜು ಚಟುವಟಿಕೆಗಳನ್ನು ಶ್ರದ್ಧೆಯಿಂದ ಮಾಡುತ್ತ ಬಂದಿದ್ದೇವೆ. ಯುಜಿಸಿ ನಿಯಮಾವಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿದ್ದೇವೆ. ಆದರೂ ಸೇವೆ ಕಾಯಂಗೊಳಿಸಲು ಸರ್ಕಾರ ಮುಂದಾಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

    ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶದನದಲ್ಲಿ ಈ ಕುರಿತು ಚರ್ಚೆ ನಡೆಸಿ, ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸಿಕೊಡಬೇಕು. ಹೀಗಾಗಿ ತರಗತಿಗಳನ್ನು ಬಹಿಷ್ಕರಿಸಿದ್ದೇವೆ. ಸರ್ಕಾರ ಕೂಡಲೇ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು. ಕಾಲೇಜಿನ 142 ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

    ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ: ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಶುಕ್ರವಾರ ನಗರದ ಡಿಸಿ ಕಚೇರಿ ಆವರಣದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಪರೀಕ್ಷೆಗಳು ಹತ್ತಿರ ಬರುತ್ತಿದ್ದು, ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಈಗ ಅತಿಥಿ ಉಪನ್ಯಾಸಕರು ಸಹ ತರಗತಿ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ. ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಎಸ್‌ಎಫ್‌ಐ ಸಂಘಟನೆಯ ಕೆ.ಎ.ಪವನ್ ಕುಮಾರ್, ವಿಜಯಭಾಸ್ಕರ್, ಹಸನ್, ವಿನಯ್‌ಕುಮಾರ್, ಎಂ.ಗೋವರ್ಧನ್, ಜೆ.ರಾಘವೇಂದ್ರ, ಭರತ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts