ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Prajwal Revanna
Published on

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೂರನೇ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಈ ಕುರಿತ ಅರ್ಜಿಯನ್ನು ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ವಜಾಗೊಳಿಸಿ ಆದೇಶಿಸಿದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಸೆರೆವಾಸ ಮುಂದುವರೆಯಲಿದೆ.​

ನಿನ್ನೆಯಷ್ಟೇ ಪ್ರಜ್ವಲ್ ಸಹೋದರ ಮತ್ತು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದರ ಖುಷಿಯಲ್ಲಿದ್ದ ಕುಟುಂಬಸ್ಥರು ಇಂದು ಪ್ರಜ್ವಲ್​ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ ನ್ಯಾಯಾಲಯ, ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿರುವುದರಿಂದ ಪ್ರಜ್ವಲ್‌ ರೇವಣ್ಣ ಈಗ ಹೈಕೋರ್ಟ್‌ ಮೊರೆ ಹೋಗುವುದು ಅನಿವಾರ್ಯವಾಗಿದೆ. ಈ ಹಿಂದೆ ಇದೇ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು. ಇವುಗಳಲ್ಲಿ ಒಂದು ರೆಗ್ಯುಲರ್ ಜಾಮೀನು ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net