More

    ಬಿಜೆಪಿಗೆ ಮರಳಿದ ಶೆಟ್ಟರ್ ಬೆಂಬಲಿಗರು

    ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೆಂಬಲಿಗರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಇಲ್ಲಿನ ದೇಶಪಾಂಡೆ ನಗರದ ಪಕ್ಷದ ಕಚೇರಿ ಆವರಣದಲ್ಲಿ ಬುಧವಾರ ನೆರವೇರಿತು.

    ತಮ್ಮ ಬೆಂಬಲಿಗರಿಗೆ ಬಿಜೆಪಿ ಶಾಲು ಹೊದಿಸಿ, ಪಕ್ಷಕ್ಕೆ ಬರಮಾಡಿಕೊಂಡ ಜಗದೀಶ ಶೆಟ್ಟರ್, ಎಲ್ಲರೂ ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸೋಣ. ಮುಂದಿನ ದಿನಗಳಲ್ಲಿ ಕಾಂಗ್ರೆಸ್​ನ ಇನ್ನೂ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಕಮಲಪಡೆ ಸೇರಲಿದ್ದಾರೆ ಎಂದರು.

    ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ವಾತಾವರಣ ಇದೆ. ಜಾಗತಿಕ ಮಟ್ಟದಲ್ಲಿ ಭಾರತ 4ನೇ ದೊಡ್ಡ ಆರ್ಥಿಕ ದೇಶವಾಗಿದೆ. ಮುಂದಿನ ವರ್ಷಗಳಲ್ಲಿ ದೇಶದ ಆರ್ಥಿಕ ಸ್ಥಿತಿ ಮತ್ತಷ್ಟು ಸುಧಾರಿಸಲಿದೆ ಎಂದು ಹೇಳಿದರು.

    ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370ಕ್ಕೂ ಹೆಚ್ಚು ಹಾಗೂ ಎನ್​ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ರಾಜ್ಯದಿಂದ ಕಳೆದ ಬಾರಿ 25 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿ ಜೆಡಿಎಸ್ ಮೈತ್ರಿಯೊಂದಿಗೆ ಸೇರಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಇದೇ ಸಂದರ್ಭದಲ್ಲಿ ಟೀಕಿಸಿದ ಜಗದೀಶ ಶೆಟ್ಟರ್, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ನೀಡುವಲ್ಲಿ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಆದರೆ, ಈ ಬಗ್ಗೆ ನೀತಿ ಆಯೋಗವನ್ನು ಪ್ರಶ್ನಿಸಲು ಮುಂದಾಗುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್​ನ ಸಂಸದರು ಲೋಕಸಭೆಯಲ್ಲಿ ಚಕಾರ ಎತ್ತುತ್ತಿಲ್ಲ. ಕಾಂಗ್ರೆಸ್​ನವರು ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡುತ್ತ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ದೂರಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ರಾಜಕಾರಣದಲ್ಲಿ ಕೆಲವು ಬಾರಿ ಭಿನ್ನಾಭಿಪ್ರಾಯಗಳು ಸಹಜ. ಎಲ್ಲವನ್ನೂ ಮರೆತು ಒಗ್ಗಟ್ಟಾಗಿ ಚುನಾವಣೆ ಎದುರಿಸೋಣ ಎಂದು ಹೇಳಿದರು.

    ಮಲ್ಲಿಕಾರ್ಜುನ ಸಾವಕಾರ, ನಾಗೇಶ ಕಲಬುರ್ಗಿ ಮತ್ತಿತರರು ಮರಳಿ ಬಿಜೆಪಿ ಸೇರಿದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾ. ನಾಗರಾಜ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಸಂತೋಷ ಚವ್ಹಾಣ, ಬೀರಪ್ಪ ಖಂಡೇಕಾರ, ರೂಪಾ ಶೆಟ್ಟಿ, ಉಮೇಶಗೌಡ ಕೌಜಗೇರಿ, ರಾಜಣ್ಣ ಕೊರವಿ, ಬಿಜೆಪಿಯ ಮಹೇಂದ್ರ ಕೌತಾಳ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts