More

    ದತ್ತಾಂಶ ಕಳವು ಅಸಾಧ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ

    ಶಿವಮೊಗ್ಗ: ರಾಜ್ಯದಲ್ಲಿ ಮತದಾರರ ಅಂಕಿ ಅಂಶಗಳ ದತ್ತಾಂಶ ಕಳವು ಕುರಿತು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
    ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿಲ್ಲ. ದತ್ತಾಂಶ ಕಳವು ಮಾಡಲು ಸಾಧ್ಯವಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಜತೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು ನೀಡಿದ್ದು ತನಿಖೆ ನಡೆಸಲಾಗುವುದು ಎಂದರು.
    ಸಂವಿಧಾನವನ್ನು ಧಿಕ್ಕರಿಸಿ ತುರ್ತು ಪರಿಸ್ಥಿತಿ ತಂದಿದ್ದು ಕಾಂಗ್ರೆಸ್. ಡಾ. ಬಿ.ಆರ್.ಅಂಬೇಡ್ಕರ್ ಅವರು ಚುನಾವಣೆ ಸ್ಪರ್ಧಿಸಿದಾಗ ಸೋಲಿಸಿದ್ದು ಇದೇ ಕಾಂಗ್ರೆಸ್. ಆದರೆ ಇಂದು ಅವರು ಬಿಜೆಪಿಗೆ ಸಂವಿಧಾನದ ಬಗ್ಗೆ ಪಾಠ ಮಾಡುತ್ತಿದ್ದಾರೆ. ಇದನ್ನು ಹೇಳುವ ನೈತಿಕ ಹಕ್ಕು ಕೂಡ ಅವರಿಗಿಲ್ಲ ಎಂದರು.
    21, 22ಕ್ಕೆ ಕೇಂದ್ರ ತಜ್ಞರ ತಂಡ:
    ಅಡಕೆ ಎಲೆಚುಕ್ಕಿ ರೋಗಕ್ಕೆ ಸಂಬಂಧಿಸಿದಂತೆ ನ.21ರಂದು ಕೊಪ್ಪ ಮತ್ತು 22ರಂದು ತೀರ್ಥಹಳ್ಳಿ, ಹೊಸನಗರ ಭಾಗಕ್ಕೆ ಕೇಂದ್ರದ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ಭಾಗದಲ್ಲಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಎಲೆಚುಕ್ಕೆ ರೋಗಕ್ಕೆ ಪರಿಣಾಮಕಾರಿಯಾದ ಔಷಧ ಕಂಡುಹಿಡಿಬೇಕಿದೆ. ಆ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಕೇಂದ್ರ ತಂಡ, ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳ ತಜ್ಞರು ಸೇರಿ ಬೆಂಗಳೂರಿನಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅಡಕೆ ಟಾಸ್ಕ್‌ಫೋರ್ಸ್ ಅಧ್ಯಕ್ಷರೂ ಆದ ಆರಗ ಜ್ಞಾನೇಂದ್ರ ಹೇಳಿದರು.
    ನ.27ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತೀರ್ಥಹಳ್ಳಿ ಪ್ರವಾಸ ಕೈಗೊಂಡಿದ್ದಾರೆ. ಅದು 700 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ತೀರ್ಥಹಳ್ಳಿಯ ನೆಹರೂ ಮೈದಾನದಲ್ಲಿ ಶಂಕುಸ್ಥಾಪನೆ ನೆರವೇರಿಸುವರು ಎಂದರು.
    ಬಂಡೆ ಕಾರ್ಮಿಕರಿಗೆ ಶಾಶ್ವತ ಪರಿಹಾರ:
    ತೀರ್ಥಹಳ್ಳಿಯ ಬಂಡೆ ಕಾಮಗಾರಿಗಳ ಟೆಂಡರ್ ಕುರಿತು ಪ್ರತಿಕ್ರಿಯೆ ನೀಡಿದ ಆರಗ ಜ್ಞಾನೇಂದ್ರ, ಈ ವಿಚಾರದಲ್ಲಿ ಕಾಂಗ್ರೆಸ್ ಪ್ರತಿಭಟನೆ ರಾಜಕೀಯ ಪ್ರೇರಿತವಾದುದ್ದು. ಅವರ ಅವಧಿಯಲ್ಲಿ ಪರಿಹಾರ ಕಂಡುಕೊಳ್ಳಲಿಲ್ಲ. ಈಗ ಪ್ರತಿಭಟನೆ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಂಡೆ ಕಾರ್ಮಿಕರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು. 14 ಎಕರೆ ಟೆಂಡರ್ ಪ್ರಕ್ರಿಯೆ ನಡೆಸಿದ್ದು 6 ಎಕರೆ ಜಾಗವನ್ನು ಸಂಘಕ್ಕೆ ನೀಡಲಾಗುವುದು. ಕಾನೂನು ತೊಡಕಿದ್ದು ಅದನ್ನು ಸರಿಪಡಿಸಲಾಗುವುದು. ಅನಧಿಕೃತ ಕಲ್ಲು ಕ್ವಾರೆಗಳನ್ನು ತಡೆಯಲು ಪ್ರಯತ್ನಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts