More

    ಪರಿಣಾಮಕಾರಿ ಪಕ್ಷಾಂತರ ನಿಷೇಧ ಕಾಯ್ದೆಗೆ ಆಗ್ರಹಿಸಿ ಪ್ರತಿಭಟನೆ

    ಶಿವಮೊಗ್ಗ: ಪಕ್ಷಾಂತರ ನಿಷೇಧ ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕೆಂದು ಒತ್ತಾಯಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ಪ್ರಮುಖರು ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ಇತ್ತೀಚೆಗೆ ನಮ್ಮ ರಾಜ್ಯ ಮಾತ್ರವಲ್ಲದೇ ದೇಶದ ವಿವಿಧೆಡೆ ಜನಪ್ರತಿನಿಧಿಗಳ ಪಕ್ಷಾಂತರ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಪ್ರಕರಣಗಳ ಶೀಘ್ರ ವಿಲೇವಾರಿ ಆಗುತ್ತಿಲ್ಲ. ಹೀಗಾಗಿ ಪಕ್ಷಾಂತರಿಗಳು ಮನಸ್ಸಿಗೆ ಬಂದಂತೆ ಪಕ್ಷ ಬದಲಾವಣೆ ಮಾಡುತ್ತಾರೆ. ಅಕಾಲಿಕ ಚುನಾವಣೆ ಮೂಲಕ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಹಲವು ಪ್ರಕರಣಗಳಲ್ಲಿ ಪಕ್ಷಾಂತರಕ್ಕೆ ಕೋಟಿ ಕೋಟಿ ರೂ. ಹಣದ ವ್ಯವಹಾರ ನಡೆದಿರುವ ಆಡಿಯೋ ಬಹಿರಂಗಗೊಂಡಿದೆ. 2010ರಲ್ಲಿ ಇಂತಹ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸಂಘಟನೆಯಿಂದ ಲೋಕಾಯುಕ್ತರಿಗೆ ದೂರು ನೀಡಲಾಗಿತ್ತು. ಇಂದಿಗೂ ಅದರ ವಿಚಾರಣೆ ಪೂರ್ಣಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
    ಒಮ್ಮೆ ವಿಧಾನಸಭೆ, ಪರಿಷತ್, ಲೋಕಸಭೆ ಇಲ್ಲವೇ ರಾಜ್ಯಸಭೆಗೆ ಆಯ್ಕೆಯಾದ ಜನಪ್ರತಿನಿಧಿಗಳು ಅದೇ ಅವಧಿಯಲ್ಲಿ ರಾಜೀನಾಮೆ ನೀಡಿ ಅದೇ ಕ್ಷೇತ್ರದಿಂದ ಮತ್ತೊಂದು ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನಿಡದಂತೆ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಬಲಪಡಿಸಬೇಕೆಂದು ಆಗ್ರಹಿಸಿದರು.
    ಅಧ್ಯಕ್ಷ ಗೋ.ರಮೇಶ್ ಗೌಡ, ಕಾರ್ಯದರ್ಶಿ ದೇವೇಂದ್ರಪ್ಪ, ಸಂಚಾಲಕ ಅಸ್ಲಂ, ಪ್ರಮುಖರಾದ ಪುಷ್ಪಾ, ಫಯಾಜ್, ರಾಜು, ಆಸೀಫ್, ರಾಜು ನಾಯ್ಕ, ಮಂಜುಳಾ ಮುಂತಾದವರು ಪ್ರತಿಭಟನೆಯಲ್ಲಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts