ಸಾಗರ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಸಹಭಾಗಿತ್ವ ಮುಖ್ಯ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಚಿಂತನೆ ಹೆಚ್ಚಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ವಿ. ಪಾಟೀಲ್ ಹೇಳಿದರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಸಮುದಾಯದತ್ತ ಶಾಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಪೂರಕ ಸೌಲಭ್ಯ ಒದಗಿಸಲಾಗುತ್ತಿದೆ. ಅನೇಕ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನ ತಲುಪಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಾರ್ವಜನಿಕರು ಕೈಜೋಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುತ್ತಿದ್ದು, ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಳಸುತ್ತಿದ್ದು, ಸರ್ಕಾರಿ ಶಾಲೆಗಳನ್ನು ವಿದ್ಯಾರ್ಥಿಗಳ ಕೊರತೆ ಕಾರಣಕ್ಕೆ ಮುಚ್ಚಲು ಬಿಡಬಾರದು. ಸರ್ಕಾರಿ ಜೂನಿಯರ್ ಕಾಲೇಜಿಗೆ ಪ್ರವೇಶ ಪಡೆಯಲು ಹೆಚ್ಚಿನ ವಿದ್ಯಾರ್ಥಿಗಳು ಆಸಕ್ತಿ ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಬಿಇಒ ಇ.ಪರಶುರಾಮಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಾಲತೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗೇಂದ್ರಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭೂಮೇಶ್, ಪ್ರಮುಖರಾದ ಡಾ. ಅನ್ನಪೂರ್ಣಾ, ಲಕ್ಷ್ಮಣ್ ಆರ್. ನಾಯ್ಕ, ದೇವೇಂದ್ರಪ್ಪ, ಮಂಜುನಾಥ್, ದತ್ತಾತ್ರೇಯ ಭಟ್, ರಾಮಚಂದ್ರಪ್ಪ, ಬಾಷಾ ಸಾಬ್, ಮಮತಾ, ಶಿವಪ್ಪ, ಶಂಕರ್ ಶಾಸ್ತ್ರಿ ಇತರರಿದ್ದರು.