ಸಾಗರ: ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಮಾ.1ರಂದು ಅರ್ಥಪೂರ್ಣವಾಗಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಎಲ್ಲ ಸಿದ್ಧತೆ ನಡೆಸಲಾಗಿದೆ ಎಂದು ಉಪವಿಭಾಗಾಧಿಕಾರಿ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಆರ್.ಯತೀಶ್ ಹೇಳಿದರು.
ತಾಲೂಕು ಮಟ್ಟದ 12ನೇ ಸಾಹಿತ್ಯ ಸಮ್ಮೇಳನ ಅಂಗವಾಗಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸಾಗರ ಸಾಹಿತ್ಯ, ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತ ಊರಾಗಿದೆ. ಸಾಹಿತ್ಯ ಸಮ್ಮೇಳನದಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತದೆ. ಈ ಬಾರಿ ಸಹ ಅತ್ಯಂತ ವಿಶೇಷವಾಗಿ ಸಮ್ಮೇಳನ ಏರ್ಪಡಿಸಲಾಗಿದೆ. ಸಮ್ಮೇಳನ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಮಾ.1ರಂದು ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಕಾರ್ಯಕ್ರಮ ನಡೆಯಲಿದೆ. ವಿವಿಧ ಗೋಷ್ಠಿ, ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಸೇರಿ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಕಸಾಪ ತಾಲೂಕು ಅಧ್ಯಕ್ಷ ವಿ.ಟಿ.ಸ್ವಾಮಿ, ತಾಪಂ ಇಒ ಶಿವಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಸಮಾಜ ಕಲ್ಯಾಣಾಧಿಕಾರಿ ಸುರೇಶ್ ಸಹಾನೆ, ನಾರಾಯಣಮೂರ್ತಿ ಕಾನುಗೋಡು, ಚಂದ್ರಶೇಖರ ಸಿರಿವಂತೆ, ಜಿ.ನಾಗೇಶ್, ಲೋಕೇಶಕುಮಾರ್, ಡಾ. ಪ್ರಸನ್ನ ಇತರರಿದ್ದರು.