ಸಾಗರ: ಸರ್ಕಾರದ ಶಿಕ್ಷಣ ವ್ಯವಸ್ಥೆಯಲ್ಲಿ ಧನಾತ್ಮಕ ಬದಲಾವಣೆ ಆಗುತ್ತಿದ್ದು, ಇಂದಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪದಲ್ಲಿ ಮಾತನಾಡಿ, ಪಾಲಕರು ಮಕ್ಕಳ ಮೇಲೆ ಅಪಾರ ಕನಸು ಇಟ್ಟುಕೊಂಡಿರುತ್ತಾರೆ. ಗುಣಮಟ್ಟದ ಶಿಕ್ಷಣ ಕೊಡಿಸಲು ಶ್ರಮಿಸುತ್ತಾರೆ. ಅವರ ಕನಸನ್ನು ಮಕ್ಕಳು ಈಡೇರಿಸಬೇಕು. ಇಲ್ಲಸಲ್ಲದ ವಿಷಯಗಳಿಗೆ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದರು.
ಆಧುನಿಕ ದಿನಗಳಲ್ಲಿ ವಿವಿಧ ಕ್ಷೇತ್ರದಲ್ಲಿ ವಿಪುಲವಾದ ಉದ್ಯೋಗಾವಕಾಶ ಇರುತ್ತವೆ. ನಿಮ್ಮ ಆಯ್ಕೆಯ ಕ್ಷೇತ್ರವನ್ನು ಆರಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚೇತನರಾಜ್ ಕಣ್ಣೂರು ಮಾತನಾಡಿ, ವಿದ್ಯಾರ್ಥಿಗಳು ವಿಶಾಲ ಭಾವನೆ ಬೆಳೆಸಿಕೊಳ್ಳಬೇಕು. ಕಾಲೇಜು ದಿನಗಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು. ಪ್ರಾಚಾರ್ಯ ಡಾ. ಜಿ.ಸಣ್ಣಹನುಮಪ್ಪ, ನಾಗಾನಂದ, ಡಾ. ಮಮತಾ ಹೆಗಡೆ, ಡಾ. ಬಿ.ಎಲ್.ರಾಜು, ಈಳಿ ಶ್ರೀಧರ್, ಗಣಪತಿ ಮಂಡಗಳಲೆ ಇತರರಿದ್ದರು.