

ಸೊರಬ: ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿ ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲಘಟ್ಟದಲ್ಲಿ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದವರು ವಚನಕಾರ ಬಸವಣ್ಣ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಗುರುಕುಮಾರ ಪಾಟೀಲ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಟೌನ್ ವೀರಶೈವ ಸಮಾಜದಿಂದ ಆಯೋಜಿಸಿದ್ದ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಸಂದೇಶ ನೀಡಿದ ಬಸವಣ್ಣ ಅವರು ಯಾವುದೇ ಒಂದು ಜಾತಿಗೆ ಸೀಮಿತರಲ್ಲ. ದಯವೇ ಧರ್ಮದ ಮೂಲವಯ್ಯ ಎಂದು ಸಂದೇಶ ಸಾರಿದವರು. 12ನೇ ಶತಮಾನದಲ್ಲೇ ಪ್ರಜಾಪ್ರಭುತ್ವದ ಮಹತ್ವ ತಿಳಿದು ಅನುಭವ ಮಂಟಪ ರಚಿಸಿದ್ದರು ಎಂದು ತಿಳಿಸಿದರು.
ಪಟ್ಟಣದ ವಿವಿಧ ರಸ್ತೆಗಳಲ್ಲಿ ಬಸವಣ್ಣ ಅವರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಮಹಾಂತೇಶ್ ಕಳ್ಳಿಕೊನೆ ಉಪನ್ಯಾಸ ನೀಡಿದರು. ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎಚ್.ಕೆ.ಜಯಶೀಲ ಗೌಡ ಮಾತನಾಡಿದರು. ಚಿಂತಕ ರಾಜಪ್ಪ ಮಾಸ್ತರ್, ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ತಹಸೀಲ್ದಾರ್ ಮಂಜುಳಾ ಬಿ. ಹೆಗಡಾಳ್, ಕೆಎಂಎಫ್ ನಿರ್ದೇಶಕ ದಯಾನಂದ ಗೌಡ, ಪಿಎಸ್‌ಐ ನಾಗರಾಜ್, ಟೌನ್ ವೀರಶೈವ ಸಮಾಜದ ಅಧ್ಯಕ್ಷ ವಿಶ್ವನಾಥ ಗೌಡ, ವೀರಶೈವ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಕುಸುಮಾ, ಜೆ.ಎಸ್.ಚಿದಾನಂದ ಗೌಡ, ಡಾ. ಎನ್.ಆರ್.ಪ್ರದೀಪ್‌ಕುಮಾರ್ ಇತರರಿದ್ದರು.