

ಸೊರಬ: ಮಕ್ಕಳಲ್ಲಿನ ಸುಪ್ತ ಪ್ರತಿಭೆ ಅನಾವರಣಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಪೂರಕವಾಗಿವೆ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ ಹೇಳಿದರು.
ತಾಲೂಕಿನ ಉಳವಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳ ಬೌದ್ಧಿಕ ವಿಕಾಸಕ್ಕೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯ. ಶಿಕ್ಷಕರು ಮತ್ತು ಪಾಲಕರು ಮಕ್ಕಳಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಗ್ರಾಮೀಣ ಭಾಗದ ಶಾಲೆಗಳನ್ನು ಉಳಿಸಲು ಶ್ರಮಿಸಬೇಕು ಎಂದು ತಿಳಿಸಿದರು.
ಉಳವಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುವ ಜತೆಯಲ್ಲಿ ಕ್ರೀಡೆ, ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಪ್ರತಿಭೆ ಅನಾವರಣಗೊಳಿಸಬೇಕು ಎಂದರು.
ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಖೋ-ಖೋ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಹುಮಾನ ಪಡೆದ ಶಾಲೆಯ ಎನ್.ಲಲಿತಾ, ಕರ್ನಾಟಕ ರಾಜ್ಯ ಗ್ರಾಮೀಣ ಶಿಕ್ಷಕರ ಪ್ರಶಸ್ತಿ ಪುರಸ್ಕೃತ ಸುಕನ್ಯಾ ಮಂಜುನಾಥ್, ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮುಖ್ಯಶಿಕ್ಷಕಿ ಗುಳ್ಳಮ್ಮ, ಎಸ್‌ಡಿಎಂಸಿ ಅಧ್ಯಕ್ಷ ನೂರ್ ಅಹಮ್ಮದ್, ಉಪಾಧ್ಯಕ್ಷೆ ಮಾಧವಿ, ಗ್ರಾಪಂ ಉಪಾಧ್ಯಕ್ಷ ತನ್ವೀರ್ ಅಹ್ಮದ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಂಜಿನಿಯರ್ ಶಿವಕುಮಾರ ಸ್ವಾಮಿ, ಎನ್.ಗಣಪತಿ, ಷಣ್ಮುಖಾಚಾರ್, ಸೋಮಶೇಖರ್ ಇತರರಿದ್ದರು.