More

    ಯೋಜನೆಗಳನ್ನು ರೈತರಿಗೆ ತಲುಪಿಸುವೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾನ : ಸಿದ್ಧಗಂಗಾ ಮಠಕ್ಕೆ ಭೇಟಿ

    ತುಮಕೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ರೈತರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

    ಸಿದ್ಧಗಂಗಾ ಮಠಕ್ಕೆ ಶನಿವಾರ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಲ್ಲದೆ, ಮಠಾಧ್ಯಕ್ಷ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದು ಸುದ್ದಿಗಾರರ ಜತೆ ಮಾತನಾಡಿದರು.ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಪ್ರಯೋಜನ ಪ್ರತಿಯೊಬ್ಬ ಅನ್ನದಾತನಿಗೂ ಸಿಗಬೇಕು ಎಂದರು.

    ಸಣ್ಣ ಹಾಗೂ ಮಧ್ಯಮ ರೈತರ ಅನೂಕೂಲಕ್ಕಾಗಿ ಕಿಸಾನ್ ಸಮ್ಮಾನ್ ನಿಧಿ, ಫಸಲ್‌ಬಿಮಾ, ಹನಿ ನೀರಾವರಿ ಯೋಜನೆ, ಜಲಜೀವನ್ ಮಿಷನ್ ಸೇರಿ ಕೇಂದ್ರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ರೈತರ ಬದುಕು ಹಸನುಗೊಳಿಸಲು ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ಕಟಿಬದ್ಧಳಾಗಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತೇನೆ. ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದು ಅಧಿಕಾರಿಗಳ ಜತೆ ಸಭೆ ಮಾಡಿ ಜಿಲ್ಲಾವಾರು ರೈತರ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.

    ಆತ್ಮನಿರ್ಭರ ಯೋಜನೆಗೆ ಪೂರಕವಾಗಿ ಕೆಲಸ: ಆತ್ಮನಿರ್ಭರ ಯೋಜನೆಗೆ ಪೂರಕವಾಗಿ ಕೆಲಸ ಮಾಡುತ್ತೇನೆ. ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆ ಅನುಷ್ಠಾನವು ಕರೊನಾ ಕಾರಣದಿಂದ ವಿಳಂಬವಾಗಿದೆ. ಈಗಾಗಲೇ ಪ್ರಧಾನಿ ಅವರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ಸೂಚನೆ ನೀಡಿದ್ದಾರೆ. ಅದರಂತೆಯೇ ಪ್ರತಿಯೊಬ್ಬ ರೈತನಿಗೂ ಅನುಕೂಲವಾಗುವಂತೆ ಹಾಗೂ ಅವರ ಆದಾಯ ದ್ವಿಗುಣಗೊಳಿಸುವ ಯೋಜನೆ ರೂಪಿಸುವುದಾಗಿ ಶೋಭಾ ಕರಂದ್ಲಾಜೆ ಹೇಳಿದರು.

    ಶಾಸಕ ಜಿ.ಬಿ. ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ. ನಂದೀಶ್, ಜಿಲ್ಲಾಧ್ಯಕ್ಷ ಬಿ. ಸುರೇಶ್‌ಗೌಡ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅರಕೆರೆ ರವೀಶ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ರೇಷ್ಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಆರ್.ಗೌಡ, ರೈತ ಮೋರ್ಚಾ ಉಪಾಧ್ಯಕ್ಷ ಎಸ್. ಶಿವಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ರವಿಶಂಕರ್, ಪ್ರೇಮಾ ಹೆಗಡೆ ಮತ್ತಿತರರು ಇದ್ದರು.

    ಕೃಷಿ ಬಗ್ಗೆ ಪ್ರಸ್ತಾಪಿಸುತ್ತಿದ್ದ ಶ್ರೀಗಳು: ಶ್ರೀ ಶಿವಕುಮಾರ ಶ್ರೀಗಳು ಮಠಕ್ಕೆ ಭೇಟಿ ನೀಡಿದಾಗಲೆಲ್ಲ ಕೃಷಿ, ರೈತರ ಕಲ್ಯಾಣ, ನೀರಾವರಿ ಹಾಗೂ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಸ್ತಾಪಿಸಿ ಸಲಹೆಗಳನ್ನು ಕೊಡುತ್ತಿದ್ದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಮರಿಸಿಕೊಂಡರು. ಪ್ರಸ್ತುತ ತಾವು ಕೃಷಿ ಸಚಿವರಾಗಿದ್ದು ಶ್ರೀಗಳ ಆಶೀರ್ವಾದ ಪಡೆದು ಇಲಾಖೆಯ ಮೂಲಕ ಕೃಷಿಕರಿಗೆ ಅನುಕೂಲ ಕಲ್ಪಿಸಲು ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts