ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ; 39 ಮಂದಿ ಸಾವು

Fire Accident
Published on

ನವದೆಹಲಿ: ಕಟ್ಟಡ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಕ್ಷಣಾರ್ಧದಲ್ಲೇ 39 ಮಂದಿಯನ್ನು ಬಲಿ ಪಡೆದಿರುವ ಘಟನೆ ಚೀನಾದ ಜಿಯಾಂಗ್ಕ್ಸಿ ಪ್ರಾಂತ್ಯದ ಕ್ಸಿನ್ಯು ನಗರದಲ್ಲಿ ನಡೆದಿದೆ.

ಯುಶುಯಿ ಜಿಲ್ಲೆಯ ತಿಯಾಂಗೋಂಗ್ನಾನ್ ಅವೆನ್ಯೂದಲ್ಲಿರುವ ಅಂಗಡಿ ಒಂದರ ಸೆಲಾರ್​ನಲ್ಲಿ ಮಧ್ಯಾಹ್ನ 3:00 ಘಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಘಟನೆಯಲ್ಲಿ 39ಮಂದಿ ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಕಿ ಕಾಣಿಸಿಕೊಂಡಿದ್ದ್ಕಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಚೀನಾದಲ್ಲಿ ಈ ರೀತಿಯ ಅವಘಡಗಳು ಪದೇ ಪದೇ ಸಂಭವಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net