ಸಿದ್ದಾಪುರ: ಫೆ. 8 ಹಾಗೂ 9ರಂದು ಎರಡು ದಿನಗಳ ಕಾಲ ಸಿದ್ದಾಪುರ ಉತ್ಸವವು ಪಟ್ಟಣದ ನೆಹರು ಮೈದಾನದಲ್ಲಿ ನಡೆಯಲಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಕೆ.ಜಿ. ನಾಯ್ಕ ಹಣಜೀಬೈಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ಸವದ ಅಂಗವಾಗಿ ಫೆ. 8ರಂದು ಬೆಳಗ್ಗೆ 9 ಗಂಟೆಯಿಂದ ಕ್ರೀಡಾ ಸ್ಪರ್ಧೆ ನಡೆಯಲಿದ್ದು, ರಸ್ತೆ ಓಟ, ಹಗ್ಗ ಜಗ್ಗಾಟ, ಸಂಗೀತ ಕುರ್ಚಿ, ಗೋಣಿಚೀಲ ಓಟದ ಸ್ಪರ್ಧೆ ಹಾಗೂ 3.30ರಿಂದ ರಂಗೋಲಿ ಸ್ಪರ್ಧೆ, ಸಂಜೆ 6ರಿಂದ 7.30 ರವರೆಗೆ ಸ್ಥಳೀಯ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಹಾಗೂ ರಾತ್ರಿ 7.30ಕ್ಕೆ ಉದ್ಘಾಟನೆ ನಡೆಯಲಿದೆ.
ದಿವ್ಯ ಸಾನ್ನಿಧ್ಯವನ್ನು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಪೀಠಾಧೀಶರಾದ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಅವರು ವಹಿಸಲಿದ್ದಾರೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾಗೂ ಶಾಸಕ ಭೀಮಣ್ಣ ಟಿ. ನಾಯ್ಕ ಉದ್ಘಾಟಿಸುವರು. ಸಿದ್ದಾಪುರ ಉತ್ಸವ ಸಮಿತಿ ಅಧ್ಯಕ್ಷ ಕೆ.ಜಿ. ನಾಯ್ಕ ಹಣಜೀಬೈಲ್ ಅಧ್ಯಕ್ಷತೆ ವಹಿಸುವರು.
ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹಾಗೂ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಉಪಸ್ಥಿತರಿರುವರು. ರಾತ್ರಿ 9 ರಿಂದ ಚಲನಚಿತ್ರ ಹಾಗೂ ಧಾರವಾಹಿ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.
ಫೆ. 9ರಂದು ಸಂಜೆ 6 ರಿಂದ 7.30ರವರೆಗೆ ಸ್ಥಳೀಯ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಹಾಗೂ ರಾತ್ರಿ 7.30 ರಿಂದ ಸಮಾರೋಪ ಸಮಾರಂಭ, ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ನಡೆಯಲಿದೆ.
ಶಾಸಕ ಭೀಮಣ್ಣ ಟಿ. ನಾಯ್ಕ, ಮಾಜಿ ಸಚಿವ ಹರತಾಳು ಹಾಲಪ್ಪ ಉಪಸ್ಥಿತರಿರುವರು. ಉತ್ಸವ ಸಮಿತಿ ಗೌರವಾಧ್ಯಕ್ಷ ಉಪೇಂದ್ರ ಪೈ, ಬಾಳೂರು ಅಧ್ಯಕ್ಷತೆ ವಹಿಸುವರು. ಡಾ. ಕೆ. ಶ್ರೀಧರ ವ್ಯೆದ್ಯ, ಶಿಕ್ಷಣ ಪ್ರಸಾರಕ ಸಮಿತಿ ಕಾರ್ಯಾಧ್ಯಕ್ಷ ಡಾ. ಶಶಿಭೂಷಣ ವಿನಾಯಕರಾವ್ ಹೆಗಡೆ ಪಾಲ್ಗೊಳ್ಳಲಿದ್ದಾರೆ. ರಾತ್ರಿ 9ರಿಂದ ಸರಿಗಮಪ ಎದೆ ತುಂಬಿ ಹಾಡುವೆನು ಖ್ಯಾತಿಯ ಗಾಯಕಿಯರು ಸೇರಿ ಪ್ರಮುಖ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೆ.ಜಿ. ನಾಯ್ಕ ತಿಳಿಸಿದ್ದಾರೆ.