ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಓಡಾಡಿಕೊಂಡಿದ್ದಾರೆ; ಅವರ ಮಾತು ನಿಜವಾದ ಉದಾಹರಣೆ ಇಲ್ಲ!

Basavaraj Bommai
Published on

ಉಡುಪಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಓಡಾಡಿಕೊಂಡಿದ್ದಾರೆ. ಅವರ ಮಾತು ಇದುವರೆಗೆ ಒಂದು ಬಾರಿಯೂ ಸತ್ಯವಾಗಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡುತ್ತಾ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ್ದಾರೆ.

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಮುಂದಿನ 5 ವರ್ಷ ನಮ್ಮ ಸರ್ಕಾರವೇ ಆಡಳಿತ ನಡೆಸಲಿದೆ ಎಂದು ಹೇಳುತ್ತಿದ್ದರು. ಆದರೆ ರಾಜ್ಯದಲ್ಲಿ ಆಗಿದ್ದೇ ಬೇರೆ. ಯಡಿಯೂರಪ್ಪ ಅವರೂ ಮುಖ್ಯಮಂತ್ರಿಯಾದರು, ಕುಮಾರಸ್ವಾಮಿಯೂ ಮುಖ್ಯಮಂತ್ರಿಯಾದರು ಎಂದು ಸಿದ್ದರಾಮಯ್ಯ ವಿರುದ್ಧ, ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಎಐಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಅರಮನೆ ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಖರ್ಗೆ ಮಾತನಾಡುತ್ತಾ, ಬಿಜೆಪಿಯಂತಹ ಭ್ರಷ್ಟ ಸರ್ಕಾರವನ್ನು ನಾನು ನೋಡಿಲ್ಲ ಎಂದು ಹೇಳಿದ್ದರು. ಈ ಮಾತಿಗೆ ಇದೀಗ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

50 ವರ್ಷ ಪೂರ್ಣ ಪ್ರಮಾಣದ ಭ್ರಷ್ಟ ಸರ್ಕಾರವೇ ಅಧಿಕಾರದಲ್ಲಿತ್ತು. ಕಾಂಗ್ರೆಸ್​​ನಿಂದಲೇ ಭ್ರಷ್ಟಾಚಾರ ಆರಂಭವಾಗಿರುವುದು. ಕಾಂಗ್ರೆಸ್ ಆಡಳಿತ ಕಾಲದಲ್ಲಿ ದಾಖಲೆ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿದೆ. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಗಂಗೋತ್ರಿ ಇದ್ದಂತೆ. ನಮ್ಮ ಆರೋಪವನ್ನು ಮುಚ್ಚಿ ಹಾಕಲು ಖರ್ಗೆ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಸುಳ್ಳು ಅಂದರೆ ಕಾಂಗ್ರೆಸ್-ಕಾಂಗ್ರೆಸ್ ಅಂದರೆ ಸುಳ್ಳು ಎಂದು ಹೇಳುವ ಮೂಲಕ ಬೊಮ್ಮಾಯಿ ತಿರುಗೇಟು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net