21ರಂದು ನೀರಾವರಿ ಕಚೇರಿಗೆ ಮುತ್ತಿಗೆ

  • ಮಂಡ್ಯ: ಒಣಗುತ್ತಿರುವ ಬೆಳೆಯನ್ನು ಉಳಿಸಿಕೊಳ್ಳಲು ಕೆಆರ್‌ಎಸ್ ಮತ್ತು ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಜೂ.21ರಂದು ನಗರದ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ರೈತ ಸಂಘದ ಮುಖಂಡ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
  • ಸತತ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ರೈತರು ಸಾಲ ಮಾಡಿ ಬೆಳೆ ಬೆಳೆದಿದ್ದಾರೆ. ಇದೀಗ ಸುಮಾರು 34 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ನೀರಿನ ಅವಶ್ಯಕತೆ ಇದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
  • ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಸರಬರಾಜು ಮಾಡಿ ತಿಂಗಳುಗಳೇ ಕಳೆದರೂ, ಬಾಕಿ ಪಾವತಿ ಮಾಡದೆ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷೃ ವಹಿಸಿದೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿ ಶೀಘ್ರ ಬಾಕಿ ಹಣ ಪಾವತಿಸುವಂತೆ ಎಚ್ಚರಿಕೆ ನೀಡಿದ್ದರೂ ಹಣ ಕೊಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಆದ್ದರಿಂದ, ಕೂಡಲೇ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.
  • ಅಂತೆಯೆ, ಮೈಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯ ಮತ್ತು ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸಹಕಾರಿ ಕ್ಷೇತ್ರದಲ್ಲಿಯೇ ಉಳಿಸಿಕೊಂಡು ಶೀಘ್ರ ಕಬ್ಬು ಅರೆಸುವಿಕೆ ಪ್ರಾರಂಭಿಸಬೇಕು. ಪ್ರಸಕ್ತ ಸಾಲಿನಲ್ಲಿ ಈಗಾಗಲೇ ಭತ್ತದ ಕೊಯ್ಲು ನಡೆಯುತ್ತಿದ್ದು, ಶೀಘ್ರ ಕೇಂದ್ರ ಸ್ಥಾಪಿಸಿ ಖರೀದಿ ಮಾಡಬೇಕು. ಮುಂದಿನ ಹಂಗಾಮಿನ ಬೆಳೆ ಬೆಳೆಯಲು ಸಹಕಾರ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕು ಮೂಲಕ ಸಾಲ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.
  • ಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ಜಿಪಂ ಮಾಜಿ ಸದಸ್ಯ ಕೆಂಪೂಗೌಡ, ರಾಮಕೃಷ್ಣ, ಗೋವಿಂದೇಗೌಡ, ನಾಗಣ್ಣ, ರಮೇಶ, ಶಂಕರ್ ಇದ್ದರು.

Leave a Reply

Your email address will not be published. Required fields are marked *