ಸಿರವಾರ: ರಾಜ್ಯದಲ್ಲಿ ಹಣಕಾಸು ಸೇವೆಗಳನ್ನು ಒದಗಿಸುವ ಸೌಹಾರ್ದ ಸಹಕಾರಿಗಳು ಹಾಗೂ ಕೃಷಿಯೇತರ ಪತ್ತಿನ ಸಹಕಾರಿಗಳಿಗೆ ಮಾರಕವಾಗುವಂತಹ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ತಹಸಿಲ್ ಕಚೇರಿ ಶಿರಸ್ತೇದಾರ್ ಫಕ್ರುದ್ದೀನ್‌ಗೆ ಸೋಮವಾರ ಮನವಿ ಸಲ್ಲಿಸಿದರು.
ಆರ್ಥಿಕ ಚಟುವಟಿಕೆಗಳನ್ನು ನಡೆಸುವ ಸಂಸ್ಥೆಗಳು ನೀಡುವ ಸಾಲ ಹಾಗೂ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಸ್ವಯಂ ನಿಗದಿಪಡಿಸಿಕೊಳ್ಳಲು ಆರ್‌ಬಿಐ ಅವಕಾಶ ನೀಡಿದೆ. ಪತ್ತಿನ ಸಹಕಾರಿ ಸಂಘಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಅನುದಾನ ನೀಡುವುದಿಲ್ಲ. ಆದರೆ, ರಾಜ್ಯ ಸರ್ಕಾರ ಸಹಕಾರಿ ಸಂಘಗಳ ಮೇಲೆ ನಿಯಂತ್ರಣ ಹೇರಲು ಮುಂದಾಗಿರುವುದು ಖಂಡನೀಯ ಎಂದರು.
ಕೇಂದ್ರ ಸರ್ಕಾರ ಕಳೆದ 30 ವರ್ಷಗಳ ಹಿಂದೆ ಸರಳೀಕೃತ ಕಾಯ್ದೆ ಜಾರಿಗೆ ತರುವ ಮೂಲಕ ದೇಶದಲ್ಲಿ ಆರ್ಥಿಕ ಚಟಿವಟಿಕೆಗಳು ಚುರುಕುಗೊಳ್ಳುವಂತೆ ಮಾಡಿತ್ತು. ಆದರೆ, ರಾಜ್ಯ ಸರ್ಕಾರ ನಿಯಂತ್ರಣಕ್ಕೆ ಮುಂದಾಗಿದೆ. ಆರ್ಥಿಕ ನಿಯಂತ್ರಣ ಕಾಯ್ದೆಯನ್ನು ರದ್ದು ಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬರೆದ ಮನವಿ ಸಲ್ಲಿಸಲಾಯಿತು.