More

    ಶೈಕ್ಷಣಿಕ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.; ಸಚಿವ ಬಿ.ಶ್ರೀರಾಮುಲು ಭರವಸೆ


    ಮುರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಉದ್ಘಾಟನೆ

    ಸಿಂಧನೂರು: ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ 3 ಸಾವಿರ ಕೋಟಿ ರೂ. ಅನುದಾನ ನೀಡಿದ್ದು, ಉತ್ತಮ ಕಟ್ಟಡ, ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

    ತಾಲೂಕಿನ ಜವಳಗೇರಾ ಸಮೀಪ ಜಿಲ್ಲಾಡಳಿತ, ಜಿಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆಶ್ರಯದಲ್ಲಿ ಭಾನುವಾರ 75ನೇ ಭಾರತ ಸ್ವಾತಂತ್ರೃದ ಅಮೃತ ಮಹೋತ್ಸವ ಅಂಗವಾಗಿ ಮುರಾರ್ಜಿ ದೇಸಾಯಿ ವಸತಿ ಶಾಲೆ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿ ಮಾತನಾಡಿದರು.

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಬದಲಾವಣೆ ತರಲು ಸರ್ಕಾರ ವಿಶೇಷ ಕಾಳಜಿ ವಹಿಸಿದೆ. ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ, ಉತ್ತಮ ಪರಿಸರ ಒದಗಿಸುವ ಉದ್ದೇಶ ಹೊಂದಿದ್ದು ಹೆಚ್ಚಿನ ಅನುದಾನ ಪಡೆದು ಹೈಟೆಕ್ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗಿದೆ. ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿವೆ ಎಂದರು.

    ಮಹತ್ವಕಾಂಕ್ಷೆ ಯೋಜನೆಯಡಿ ರಾಜ್ಯದಲ್ಲಿ 112 ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡಿದ್ದು ಅದರಲ್ಲಿ ರಾಯಚೂರು ಜಿಲ್ಲೆಯೂ ಸೇರಿದೆ. ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ವಿಶ್ವವಿದ್ಯಾಲಯಗಳ ಅಭಿವೃದ್ಧಿಗೂ ಸಿಎಂ 2.5 ಕೋಟಿ ರೂ. ವಿಶೇಷ ಅನುದಾನ ಒದಗಿಸಿದ್ದಾರೆ ಎಂದು ತಿಳಿಸಿದರು.
    ಶಾಸಕ ವೆಂಕಟರಾವ ನಾಡಗೌಡ ಮಾತನಾಡಿ, ತಾಲೂಕಿನ ಬಹುದಿನಗಳ ಬೇಡಿಕೆಯಾದ ಮುರಾರ್ಜಿ ದೇಸಾಯಿ ವಸತಿ ನಿಲಯ 21.5 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಆಗಿ ನಿರ್ಮಿಸಲಾಗಿದೆ. ಇಂಥ ಸುಸಜ್ಜಿತ ವಸತಿ ನಿಲಯ ಜಿಲ್ಲೆಯಲ್ಲಿಯೇ ಇಲ್ಲ. ಪರಿಶಿಷ್ಟ ಜಾತಿ, ಪಂಗಡ, ಅಲ್ಪ ಸಂಖ್ಯಾತರ ವಸತಿ ನಿಲಯಗಳ ನಿರ್ಮಾಣಕ್ಕೆ ನಾಲ್ಕು ಕಡೆಗಳಲ್ಲಿ ಜಾಗ ಖರೀದಿಸಲಾಗಿದೆ. ಸಿಂಧನೂರಿನಲ್ಲಿ ಎಆರ್‌ಟಿಒ ಕಚೇರಿ ಆರಂಭಕ್ಕೆ ಮಂಜೂರಾತಿ ಸಿಕ್ಕಿದ್ದು, ಹಣಕಾಸು ಅನುಮೋದನೆ ಬಾಕಿ ಇದೆ ಎಂದರು.
    ತಹಸೀಲ್ದಾರ್ ಮಂಜುನಾಥ ಭೋಗಾವತಿ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಅಮರೇಗೌಡ ವಿರೂಪಾಪುರ, ತಾಪಂ ಮಾಜಿ ಸದಸ್ಯ ಚಂದ್ರಭೂಪಾಲ ನಾಡಗೌಡ, ಗ್ರಾಪಂ ಅಧ್ಯಕ್ಷೆ ಅಮರಮ್ಮ ಮಲ್ಲಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಬಿಲ್ದಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts