ಸಿಂಧನೂರು: ತಾಯಿ, ಮಕ್ಕಳ ಆಸ್ಪತ್ರೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಸೇವೆಗೆ ಒದಗಿಸಬೇಕೆಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕ ಹಂಪನಗೌಡ ಬಾದರ್ಲಿ ಸೂಚಿಸಿದರು.

ನಗರದ ಪಿಡಬ್ಲುೃಡಿ ಕ್ಯಾಂಪ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ತಾಯಿ, ಮಕ್ಕಳ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿ ಮಾತನಾಡಿದರು. ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಜೂನ್‌ನಲ್ಲಿ ನಡೆಯಲಿದೆ. ಯಾವುದೇ ಕೆಲಸ ಬಾಕಿ ಉಳಿಸದೆ ಉದ್ಘಾಟನೆಗೆ ಸಿದ್ಧಗೊಳಿಸಬೇಕು. ನಿರ್ಲಕ್ಷೃವಹಿಸಿದರೆ ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಕೆ ನೀಡಿದರು.
ಹೆಚ್ಚುವರಿ ಅನುದಾನ ನೀಡಲಾಗುವುದು: ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಹಂಪನಗೌಡ ಬಾದರ್ಲಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿಂದ ತಾಲೂಕಿನ ಬಡವರಿಗೆ ಅನುಕೂಲವಾಗಲಿದೆ. ಜಿಲ್ಲಾಸ್ಪತ್ರೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಕಟ್ಟಡ ಆಗಿದೆ.
ಇಂಥ ಕಾಮಗಾರಿ ಮಾಡುವಾಗ ಸರಿಯಾದ ರೀತಿಯಲ್ಲಿ ವೆಂಟಿಲೇಟರ್‌ಗಳನ್ನು ಬಿಡಬೇಕು. ಬಿಡದೆ ಹಾಗೆ ಕಾಮಗಾರಿ ಮಾಡಿದ್ದಾರೆ. ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಸ್ಪತ್ರೆಗೆ ಬೇಕಾಗುವ ಕೆಲವು ಸಾಮಗ್ರಿಗಳು ಬಂದಿವೆ.
ಸಿಬ್ಬಂದಿಯನ್ನೂ ನೇಮಿಸಲಾಗಿದೆ. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಮೊದಲು ಆದ್ಯತೆ ನೀಡುವ ಕೆಲಸ ಎಲ್ಲರೂ ಮಾಡಬೇಕು. ತಾಯಿ , ಮಕ್ಕಳ ಆಸ್ಪತ್ರೆಗೆ ಹೆಚ್ಚುವರಿ ಅನುದಾನ ಬೇಕಾದರೆ ಕೆಕೆಆರ್‌ಡಿಬಿ ಹಣ ನೀಡಲಾಗುವುದು. ಈ ಬಾರಿ ವಿಶೇಷವಾಗಿ ಆರೋಗ್ಯ ಇಲಾಖೆಗೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಒಂದು ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.