ಏಕವಚನ ಪ್ರಯೋಗ ಶೋಭೆಯಲ್ಲ

ಚಾಮರಾಜನಗರ: ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಅವರು ನನ್ನನ್ನು ಬೈಯ್ದಷ್ಟು ನನಗೆ ಮತಗಳು ಹೆಚ್ಚಾಗಲಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಂಸದ ಆರ್.ಧ್ರುವನಾರಾಯಣ ಹೇಳಿದರು.

ತಾಲೂಕಿನ ಸಂತೇಮರಹಳ್ಳಿಯ ಮಾದೇಗೌಡ ಕನ್ವೆನ್ಷನ್ ಹಾಲ್‌ನಲ್ಲಿ ಯಳಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಚುನಾವಣೆಗೆ ಸ್ಪರ್ಧಿಸುತ್ತಿರುವ ಒಬ್ಬ ಹಿರಿಯ ರಾಜಕಾರಣಿ ವಿ.ಶ್ರೀನಿವಾಸಪ್ರಸಾದ್ ಅವರು ನನ್ನ ಮೇಲೆ ಏಕವಚನ ಪ್ರಯೋಗ ಮಾಡುವುದು ಶೋಭೆಯಲ್ಲ. ನಾನು ಈ ಚುನಾವಣೆಗೆ ನಿಂತಿರುವುದು ಧ್ರುವನಾರಾಯಣ ಸೋಲಿಸಲಿಕ್ಕೆ ಎಂದು ಹೇಳುತ್ತಾರೆ. ಆರೋಗ್ಯದ ದೃಷ್ಟಿಯಿಂದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಸಿದ್ದರಾಮಯ್ಯ ಅವರು ಸಂಪುಟದಿಂದ ಕೈಬಿಟ್ಟಿದ್ದರು ಎಂದರು.

ಕಷ್ಟಕಾಲದಲ್ಲಿ ನಿಮ್ಮ ಜತೆಗಿದ್ದು ಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ನಿಮ್ಮ ಮನೆಗೂ ಬಂದು ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಗುರಿಯಾಗಿದ್ದೆ. ಅಲ್ಲದೇ ನಿಮಗೆ ಹುಷಾರಿಲ್ಲದ ಸಂದರ್ಭದಲ್ಲಿ ನಿಮ್ಮನ್ನು ನಂಜನಗೂಡು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಲು ಶ್ರಮಿಸಿದ್ದೇನೆ ಎಂದು ಹೇಳಿದರು.

ರಾಜ್ಯಸಭಾ ಸದಸ್ಯರಾಗಿದ್ದ ದಿ.ರಾಜಶೇಖರಮೂರ್ತಿ ಅವರು ತಮ್ಮ ಅನುದಾನವನ್ನು ನಾನು ಹೇಳಿದ ಗ್ರಾಮಗಳಿಗೆ ನೀಡಿ ಸಹಾಯ ಮಾಡುವ ಮೂಲಕ ನನ್ನನ್ನು ರಾಜಕೀಯವಾಗಿ ಬೆಳೆಸಿದರು. ಕಳೆದ 10 ವರ್ಷದ ಅವಧಿಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುವ ನಿಟ್ಟಿನಲ್ಲಿ ಮತ್ತೊಮ್ಮೆ ನನಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಸ್ವಾತಂತ್ರೃ ಪೂರ್ವ ಹಾಗೂ ಸ್ವಾತಂತ್ರೃ ನಂತರ ದೇಶದ ಉಳಿವಿಗಾಗಿ ಕಾಂಗ್ರೆಸ್ ಶ್ರಮಿಸಿದೆ. ಇಂದಿರಾಗಾಂಧಿ ಅವರು 20 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಅಲ್ಲದೇ ಉಳುವವನೇ ಭೂಮಿಯ ಒಡೆಯ ಎಂಬ ಕಾನೂನನ್ನು ಜಾರಿಗೆ ತಂದು ಎಲ್ಲರಿಗೂ ಜಮೀನು ಮಾಲೀಕತ್ವ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.

ಹೊಂಗನೂರು ಗ್ರಾಮದ 20ಕ್ಕೂ ಹೆಚ್ಚು ಬಿಎಸ್‌ಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿದರು. ವಿಧಾನಪರಿಷತ್ ಸದಸ್ಯ ಧರ್ಮಸೇನಾ, ಮಾಜಿ ಶಾಸಕರಾದ ಎಸ್.ಜಯಣ್ಣ, ಎಸ್.ಬಾಲರಾಜ್, ಕೆಪಿಸಿಸಿ ಕಾರ್ಯದರ್ಶಿ ಎಸ್.ಸಿ.ಬಸವರಾಜು, ಜಿಪಂ ಉಪಾಧ್ಯಕ್ಷ ಯೋಗೇಶ್, ಸದಸ್ಯ ಸದಾಶಿವಮೂರ್ತಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು, ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ಚಂದ್ರು ಇತರರಿದ್ದರು.